ಉಡುಪಿ ಜಿಲ್ಲಾ ಆಸ್ಪತ್ರೆ ಲೋಕಾರ್ಪಣೆಗೆ ಶಾಸಕ ಯಶ್ಪಾಲ್ ಸುವರ್ಣ ಒತ್ತಾಯ: ನ. 15ರೊಳಗೆ ಆರೋಗ್ಯ ಸಚಿವರಿಂದ ಪರಿಶೀಲನೆಗೆ ಆಗ್ರಹ – vishwanews24
ನ. 15ರೊಳಗೆ ಉಡುಪಿ ಜಿಲ್ಲಾಸ್ಪತ್ರೆ ಲೋಕಾರ್ಪಣೆ ದಿನಾಂಕ ಘೋಷಿಸಿ: ಆರೋಗ್ಯ ಸಚಿವರಿಗೆ ಯಶ್ಪಾಲ್ ಸುವರ್ಣ ಒತ್ತಾಯ
ಉಡುಪಿ: ಉಡುಪಿ ಜಿಲ್ಲೆಯ ನೂತನ ಜಿಲ್ಲಾ ಆಸ್ಪತ್ರೆಯನ್ನು ಸಂಪೂರ್ಣ ವೈದ್ಯಕೀಯ ಸೌಲಭ್ಯಗಳೊಂದಿಗೆ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಸಚಿವರು 2026ರ ನವೆಂಬರ್ 15ರೊಳಗೆ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಹಾಗೂ ಲೋಕಾರ್ಪಣೆಯ ದಿನಾಂಕವನ್ನು ಘೋಷಿಸಬೇಕು ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಒತ್ತಾಯಿಸಿದರು.
ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರತ್ಯೇಕಗೊಂಡು ಉಡುಪಿ ಜಿಲ್ಲೆ ಅಸ್ತಿತ್ವಕ್ಕೆ ಬಂದು 28 ವರ್ಷಗಳು ಕಳೆದಿದ್ದರೂ, ಜಿಲ್ಲೆಯ ಜನರ ಬಹುಕಾಲದ ಬೇಡಿಕೆಯಾಗಿರುವ ಸುಸಜ್ಜಿತ ಜಿಲ್ಲಾ ಆಸ್ಪತ್ರೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡಿಲ್ಲ. 2021ರಲ್ಲಿ ನಿರ್ಮಾಣ ಕಾಮಗಾರಿ ಆರಂಭಗೊಂಡ ನೂತನ ಜಿಲ್ಲಾಸ್ಪತ್ರೆಯ ಕಟ್ಟಡ 2023ರಲ್ಲಿಯೇ ಬಹುತೇಕ ಪೂರ್ಣಗೊಂಡಿದ್ದರೂ, ಇದುವರೆಗೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿಲ್ಲ.
ಕಳೆದ ಮೂರೂವರೆ ವರ್ಷಗಳಿಂದ ವೈಯಕ್ತಿಕವಾಗಿ, ಪತ್ರಗಳ ಮೂಲಕ ಹಾಗೂ ವಿಧಾನಮಂಡಲದ ಅಧಿವೇಶನಗಳಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದರೂ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ ಎಂದು ಮನವಿಯಲ್ಲಿ ಅಸಮಾಧಾನ ವ್ಯಕ್ತಪಡಿಸಲಾಗಿದೆ. ಹಿಂದಿನ ಮತ್ತು ಪ್ರಸ್ತುತ ಮುಖ್ಯಮಂತ್ರಿಗಳು, ಆರೋಗ್ಯ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಆಸ್ಪತ್ರೆ ಕಾರ್ಯಾರಂಭದ ಬಗ್ಗೆ ಸ್ಪಷ್ಟ ನಿರ್ಧಾರ ಹೊರಬಿದ್ದಿಲ್ಲ ಎಂದರು.
ಇತ್ತೀಚೆಗೆ ಹಳೆಯ ಆಸ್ಪತ್ರೆಯಲ್ಲಿದ್ದ ಸುಮಾರು 30 ವರ್ಷಗಳಷ್ಟು ಹಳೆಯದಾದ, ಜೀರ್ಣಾವಸ್ಥೆಯಲ್ಲಿರುವ ಹಾಗೂ ತುಕ್ಕು ಹಿಡಿದಿರುವ ಮಂಚಗಳು, ಕಪಾಟುಗಳು ಮತ್ತು ಇತರ ಉಪಕರಣಗಳನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಿಸಲು ಇಲಾಖೆ ಮುಂದಾಗಿರುವುದು ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ. 250 ಹಾಸಿಗೆಗಳ ಆರು ಮಹಡಿಗಳ ನೂತನ ಆಸ್ಪತ್ರೆಯನ್ನು ಸೂಕ್ತವಾಗಿ ಸಜ್ಜುಗೊಳಿಸದೆ ಹಳೆಯ ಉಪಕರಣಗಳನ್ನು ಸ್ಥಳಾಂತರಿಸುವ ಕ್ರಮಕ್ಕೆ ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಎಚ್ಚರಿಕೆ ನೀಡಿದ ಬಳಿಕ ಸ್ಥಳಾಂತರ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ನೂತನ ಜಿಲ್ಲಾಸ್ಪತ್ರೆಯ ಮೂಲ ಯೋಜನೆಗೆ ಅನುಗುಣವಾಗಿ ಗುಣಮಟ್ಟದ ಹೊಸ ಪೀಠೋಪಕರಣಗಳು, ಆಧುನಿಕ ವೈದ್ಯಕೀಯ ಉಪಕರಣಗಳು ಹಾಗೂ ಅಗತ್ಯ ತಾಂತ್ರಿಕ ಸೌಲಭ್ಯಗಳನ್ನು ಒದಗಿಸಬೇಕು. ಎಂಆರ್ಐ, ಸಿಟಿ ಸ್ಕ್ಯಾನಿಂಗ್, ಡಿಜಿಟಲ್ ಎಕ್ಸ್ರೇ, ತೀವ್ರ ನಿಗಾ ಘಟಕ (ಐಸಿಯು), ವೆಂಟಿಲೇಟರ್ ಸೇರಿದಂತೆ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸಬೇಕು. ಆಸ್ಪತ್ರೆಯ ಸುಗಮ ಕಾರ್ಯನಿರ್ವಹಣೆಗೆ ವೈದ್ಯರು, ತಜ್ಞ ವೈದ್ಯರು, ಶುಶ್ರೂಷಕರು, ತಾಂತ್ರಿಕ ಸಿಬ್ಬಂದಿ ಸೇರಿದಂತೆ ಅಗತ್ಯ ಹುದ್ದೆಗಳನ್ನು ಮಂಜೂರು ಮಾಡಿ ಭರ್ತಿ ಮಾಡಬೇಕು ಎಂದು ಆಗ್ರಹಿಸಿದರು.
ರಾಜ್ಯದ ಇತರ ಸುಸಜ್ಜಿತ ಜಿಲ್ಲಾ ಆಸ್ಪತ್ರೆಗಳ ಮಾದರಿಯಲ್ಲಿ ಉಡುಪಿ ಜಿಲ್ಲಾಸ್ಪತ್ರೆಯನ್ನೂ ಸಮಗ್ರ ವೈದ್ಯಕೀಯ ಸೇವೆಗಳೊಂದಿಗೆ ಅಭಿವೃದ್ಧಿಪಡಿಸಬೇಕು. ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಕಟ್ಟಡವು ಅಗತ್ಯ ಸೌಲಭ್ಯಗಳ ಕೊರತೆಯಿಂದಾಗಿ ಜನರಿಗೆ ನಿರೀಕ್ಷಿತ ಆರೋಗ್ಯ ಸೇವೆ ನೀಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಬಾರದು.
ಈಗಾಗಲೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಗಮನಕ್ಕೆ ವಿಷಯವನ್ನು ತರಲಾಗಿದ್ದು, ಜಿಲ್ಲೆಯ ಜನರ ಆರೋಗ್ಯ ಮತ್ತು ಜೀವ ರಕ್ಷಣೆಯ ದೃಷ್ಟಿಯಿಂದ ಸಚಿವರು ನವೆಂಬರ್ 15ರೊಳಗೆ ನೂತನ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಆಸ್ಪತ್ರೆಯ ಲೋಕಾರ್ಪಣೆಯ ಕುರಿತು ಸ್ಪಷ್ಟ ಭರವಸೆ ನೀಡುವುದರೊಂದಿಗೆ ವೈದ್ಯಕೀಯ ಉಪಕರಣಗಳು, ಪೀಠೋಪಕರಣಗಳು, ಮೂಲಸೌಕರ್ಯ ಮತ್ತು ಸಿಬ್ಬಂದಿ ನೇಮಕಾತಿಗೆ ಸಂಬಂಧಿಸಿದಂತೆ ಕಾಲಮಿತಿಯ ಕಾರ್ಯಯೋಜನೆಯನ್ನು ಪ್ರಕಟಿಸಬೇಕು ಎಂದು ಮನವಿ ಮಾಡಲಾಗಿದೆ.
ನಿಗದಿತ ದಿನಾಂಕದೊಳಗೆ ಆರೋಗ್ಯ ಸಚಿವರಿಂದ ಯಾವುದೇ ಸ್ಪಷ್ಟ ಭರವಸೆ ದೊರೆಯದಿದ್ದಲ್ಲಿ ಜಿಲ್ಲೆಯ ಜನತೆಯೊಂದಿಗೆ ಸೇರಿ ಉಗ್ರ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಕೆ ನೀಡಿದರು.
