ಉತ್ತರ ಪ್ರದೇಶ : ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಬೆಂಕಿಗಾಹುತಿ ; ಆರು ಮಂದಿ ಸಜೀವ ದಹನ – vishwanews24

Featured, ರಾಷ್ಟ್ರ ನ್ಯೂಸ್

ಉತ್ತರ ಪ್ರದೇಶ : ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಬೆಂಕಿಗಾಹುತಿ ; ಆರು ಮಂದಿ ಸಜೀವ ದಹನ

ಉತ್ತರ ಪ್ರದೇಶ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಬಳಿಕ ಬೆಂಕಿ ಹೊತ್ತಿಕೊಂಡ ಪರಿಣಾಮ ಆರು ಮಂದಿ ಸಜೀವ ದಹನವಾಗಿರುವ ದಾರುಣ ಘಟನೆ ಉತ್ತರ ಪ್ರದೇಶದ ಮುಜಫ್ಫರ್‌ನಗರ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ತಿತಾವಿ ಪೊಲೀಸ್ ಠಾಣಾ ವ್ಯಾಪ್ತಿಯ ಜಗಾಹೇಡಿ ಗ್ರಾಮದ ಸಮೀಪ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದವರು ಹರಿಯಾಣದ ಜಿಂದ್ ಜಿಲ್ಲೆಯ ನಿವಾಸಿಗಳಾಗಿದ್ದು, ಜಿಂದ್‌ನಿಂದ ಹರಿದ್ವಾರದ ಕಡೆಗೆ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಜಗಾಹೇಡಿ ಗ್ರಾಮದ ಸಮೀಪ ಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್‌ಗೆ ಬಲವಾಗಿ ಡಿಕ್ಕಿ ಹೊಡೆದು ರಸ್ತೆಯ ಮೇಲೆ ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಇಡೀ ವಾಹನವನ್ನು ಬೆಂಕಿಯ ಜ್ವಾಲೆಗಳು ಆವರಿಸಿವೆ.

ಬೆಂಕಿಯ ತೀವ್ರತೆಯಿಂದಾಗಿ ಕಾರಿನಲ್ಲಿದ್ದವರಿಗೆ ಹೊರಬರಲು ಸಾಧ್ಯವಾಗದೆ ಒಳಗೇ ಸಿಲುಕಿಕೊಂಡಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ ತಿತಾವಿ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಸಾಕಷ್ಟು ಪ್ರಯತ್ನಗಳ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಕಾರಿನೊಳಗಿದ್ದ ಆರು ಮಂದಿಯ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಬೆಂಕಿಯ ತೀವ್ರತೆಗೆ ಮೃತದೇಹಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದವು ಎಂದು ತಿಳಿದುಬಂದಿದೆ.

ಪೊಲೀಸರು ಮೃತದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಮಹಾಡಿಕ್ ಹಾಗೂ ಫುಗಾನಾ ವಿಭಾಗದ ಪೊಲೀಸ್ ಉಪ ಅಧೀಕ್ಷಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿದುಬರಬೇಕಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply