ಉನ್ನಾವೋ ಅತ್ಯಾಚಾರ ಪ್ರಕರಣದ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ ಬಿಜೆಪಿ ಪಕ್ಷದಿಂದ ಉಚ್ಛಾಟನೆ -Vishwanews24
ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದ ಆರೋಪಿ ಹಾಗೂ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರನ್ನು ಪಕ್ಷದಿಂದ ಗುರುವಾರ ಉಚ್ಚಾಟಿಸಲಾಗಿದೆ.
“ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಹೊತ್ತಿರುವ ಪಕ್ಷದ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರಿಗೆ ಆಡಳಿತಾರೂಢ ಬಿಜೆಪಿ ಬೆಂಬಲವಿದೆ” ಎಂದು ಪ್ರತಿಪಕ್ಷ ಕಾಂಗ್ರೆಸ್, ಬಿಎಸ್ಪಿ ಮತ್ತು ಎಸ್ಪಿ ಸೇರಿ ಅನೇಕ ಪಕ್ಷದ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ, ಆರೋಪ ಎದುರಿಸುತ್ತಿರುವ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ನನ್ನು ‘ಭಾರತೀಯ ಜನತಾ ಪಕ್ಷ’ ಗುರುವಾರ ಪಕ್ಷದಿಂದ ಉಚ್ಛಾಟಿಸಿದೆ ಎಂದು ಯುಪಿ ಬಿಜೆಪಿ ಮುಖ್ಯಸ್ಥ ಸ್ವತಂತ್ರ ದೇವ್ ಸಿಂಗ್ ಹೇಳಿದ್ದಾರೆ.
ಉನ್ನಾವ್ ಅತ್ಯಾಚಾರ ಪ್ರಕರಣ ಈಗಾಗಲೇ ಸಿಬಿಐಗೆ ಹಸ್ತಾಂತರವಾಗಿದ್ದು, ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಮತ್ತು ಇತರ ಒಂಬತ್ತು ಮಂದಿ ವಿರುದ್ಧ ಸೋಮವಾರ ಪ್ರಕರಣ ದಾಖಲಿಸಲಾಗಿದೆ. ಅಲ್ಲದೆ ಸಿಬಿಐ ತನಿಖೆಯನ್ನು ಅತ್ಯಂತ ತ್ವರಿತಗತಿಯಲ್ಲಿ ಅಂದರೆ 7 ದಿನಗಳೊಳಗೆ ಮುಗಿಸುವಂತೆ ಸುಪ್ರೀಂ ಕೋರ್ಟ್ ಸಿಬಿಐಗೆ ಆದೇಶ ನೀಡಿದೆ.
