ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಹೈಕೋರ್ಟ್ ಸಮ್ಮತಿ -Vishwanews24

Featured, ರಾಜ್ಯ ನ್ಯೂಸ್

ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಹೈಕೋರ್ಟ್ ಸಮ್ಮತಿ -Vishwanews24

ಬೆಂಗಳೂರು: 2020-21ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಹೈಕೋರ್ಟ್ ಸಮ್ಮತಿ ‌ನೀಡಿದೆ. ಈ ಸಂಬಂಧ ರಾಜ್ಯ ಸರ್ಕಾರದ ನಿರ್ಧಾರವನ್ನು ಕೋರ್ಟ್ ಸೋಮವಾರ ಎತ್ತಿಹಿಡಿದಿದ್ದು, ಜುಲೈ 19 ಮತ್ತು 22ಕ್ಕೆ ಪರೀಕ್ಷೆ ನಡೆಯಲಿದೆ.

ಕೋವಿಡ್ ಕಾರಣದಿಂದ ಪರೀಕ್ಷೆ ರದ್ದುಗೊಳಿಸುವಂತೆ ಕೋರಿ ಎಸ್‌.ವಿ. ಸಿಂಗ್ರೇಗೌಡ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನಾ ಮತ್ತು ಹಂಚಾಟೆ ಸಂಜೀವ್ ಕುಮಾರ್ ಅವರಿದ್ದ ಪೀಠ ವಜಾಗೊಳಿಸಿದೆ.

ಎಲ್ಲಾ ಮುನ್ನೆಚ್ಚರಿಕೆ ಕೈಗೊಂಡು ಎರಡು ದಿನ ಪರೀಕ್ಷೆ ನಡೆಸಲಾಗುವುದು ಎಂದು ಅಡ್ವೊಕೇಟ್ ಜನರಲ್ ನ್ಯಾಯಾಲಯಕ್ಕೆ ತಿಳಿಸಿದರು.

ಒಬ್ಬ ವಿದ್ಯಾರ್ಥಿಗೆ ಒಂದು ಮೇಜು ನಿಗದಿ ಮಾಡಿ ಅಂತರ ಕಾಪಾಡಿಕೊಂಡು ಪರೀಕ್ಷೆ ಬರೆಸಲಾಗುವುದು. ಆರೋಗ್ಯ ತಪಾಸಣೆಗೆ ವೈದ್ಯಕೀಯ ಸಿಬ್ಬಂದಿ ನಿಯೋಜನೆ ಮಾಡಿಕೊಳ್ಳಲಾಗುವುದು ಎಂದು ವಿವರಿಸಿದರು.

ಸರ್ಕಾರದ ವಾದ ಆಲಿಸಿದ ಪೀಠ, ಈ ವಿಷಯದಲ್ಲಿ ನ್ಯಾಯಾಲಯ ಹಸ್ತಕ್ಷೇಪ ‌ಮಾಡುವುದಿಲ್ಲ ಎಂದು ತಿಳಿಸಿ ಅರ್ಜಿ ವಜಾಗೊಳಿಸಿತು. ಮಾರ್ಗದರ್ಶಿ ಸೂತ್ರಗಳನ್ನು ಪಾಲಿಸಿ ಪರೀಕ್ಷೆ ನಡೆಸಬಹುದು ಎಂದು ತಿಳಿಸಿತು.