ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ – vishwanews24
ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಪೊಲೀಸ್ ಇಲಾಖೆ ಕೈಗೊಂಡಿರುವ ಕಾರ್ಯಾಚರಣೆಯನ್ನು ವಿಶ್ವ ಹಿಂದೂ ಪರಿಷತ್ ಸ್ವಾಗತಿಸಿದ್ದು, ಇದೇ ಮಾದರಿಯ ಕಾರ್ಯಾಚರಣೆಯನ್ನು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಸೇರಿದಂತೆ ಇಡೀ ಕರಾವಳಿ ಜಿಲ್ಲೆಗಳಿಗೆ ವಿಸ್ತರಿಸಬೇಕೆಂದು ಆಗ್ರಹಿಸಿದೆ.
ವಿಶ್ವ ಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತದ ಸಹ ಕಾರ್ಯದರ್ಶಿ ಶರಣ್ ಕುಮಾರ್ ಪಂಪುವೆಲ್ ಅವರು ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯಲ್ಲಿ, ಮಂಗಳೂರಿನ ಸುರತ್ಕಲ್, ಉರ್ವ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ವಲಸಿಗರು ಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸುವಂತೆ ಆದೇಶಿಸಿರುವ ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರ ಕ್ರಮವನ್ನು ಶ್ಲಾಘಿಸಿದ್ದಾರೆ.
ಚಿಕನ್ ಪ್ರಿಯರಿಗೆ ಶಾಕ್ : ದಾಖಲೆಯ ಏರಿಕೆ ಕಂಡ ಚಿಕನ್, ಮೊಟ್ಟೆ ದರ – vishwanews24
ಕರಾವಳಿ ಭಾಗದಲ್ಲಿ ಅಕ್ರಮವಾಗಿ ಬಾಂಗ್ಲಾದೇಶಿ ಪ್ರಜೆಗಳು ನುಸುಳಿ ನೆಲೆಸಿರುವುದು ರಾಷ್ಟ್ರೀಯ ಭದ್ರತೆ ಹಾಗೂ ಸ್ಥಳೀಯರ ಹಿತಾಸಕ್ತಿಗೆ ಗಂಭೀರ ಅಪಾಯವನ್ನುಂಟು ಮಾಡುವ ವಿಷಯವಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಕೈಗೊಂಡಿರುವ ತನಿಖೆ ಮತ್ತು ಮುಂಜಾಗ್ರತಾ ಕ್ರಮಗಳು ಪ್ರಶಂಸನೀಯವಾಗಿವೆ ಎಂದು ಅವರು ತಿಳಿಸಿದ್ದಾರೆ.
ಅಕ್ರಮ ನುಸುಳುಕೋರರ ಜಾಲವು ಕೇವಲ ಮಂಗಳೂರು ನಗರಕ್ಕೆ ಸೀಮಿತವಾಗದೆ ಇಡೀ ಕರಾವಳಿ ಪ್ರದೇಶಕ್ಕೆ ವ್ಯಾಪಿಸಿರುವ ಸಾಧ್ಯತೆ ಇರುವುದರಿಂದ, ಪಶ್ಚಿಮ ವಲಯದ ಪೊಲೀಸ್ ಮಹಾನಿರೀಕ್ಷಕರು (ಐಜಿಪಿ) ತಕ್ಷಣ ಮಧ್ಯಪ್ರವೇಶಿಸಿ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಇದೇ ರೀತಿಯ ವಿಶೇಷ ತಪಾಸಣೆ ಮತ್ತು ಕಾರ್ಯಾಚರಣೆಗೆ ಆದೇಶ ನೀಡಬೇಕೆಂದು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ.
ಸಾರ್ವಜನಿಕರು ತಮ್ಮ ಸುತ್ತಮುತ್ತ ಅನುಮಾನಾಸ್ಪದವಾಗಿ ನೆಲೆಸಿರುವ ವ್ಯಕ್ತಿಗಳ ಬಗ್ಗೆ ಸಂಬಂಧಿಸಿದ ಪೊಲೀಸ್ ಠಾಣೆ ಅಥವಾ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಪೊಲೀಸ್ ಇಲಾಖೆ ಮನವಿ ಮಾಡಿರುವುದನ್ನು ಸ್ವಾಗತಿಸಿರುವ ವಿಶ್ವ ಹಿಂದೂ ಪರಿಷತ್, ಸಾರ್ವಜನಿಕರಲ್ಲಿ ಈ ಕುರಿತು ಜಾಗೃತಿ ಮೂಡಿಸುವ ಜೊತೆಗೆ, ದೇಶದ ಭದ್ರತೆ ಹಾಗೂ ಕಾನೂನು ಸುವ್ಯವಸ್ಥೆಯ ಹಿತದೃಷ್ಟಿಯಿಂದ ಕರಾವಳಿ ಜಿಲ್ಲೆಗಳಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ಪ್ರಜೆಗಳನ್ನು ಪತ್ತೆಹಚ್ಚುವ ಕಾರ್ಯದಲ್ಲಿ ಪೊಲೀಸ್ ಇಲಾಖೆಗೆ ಸಂಪೂರ್ಣ ಸಹಕಾರ ನೀಡಲು ಸದಾ ಸಿದ್ಧವಿದೆ ಎಂದು ಶರಣ್ ಕುಮಾರ್ ಪಂಪುವೆಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
