ಖಾಸಗಿ ಕ್ಲಿನಿಕ್ ತೆರೆದು ನಡೆಸುತ್ತಿರುವ ಸರ್ಕಾರಿ ವೈದ್ಯರಿಗೆ ಶ್ರೀರಾಮುಲು ಎಚ್ಚರಿಕೆ -Vishwanews24
ತುಮಕೂರು : ರಾಜ್ಯದ ಅನೇಕ ಸರ್ಕಾರಿ ವೈದ್ಯರು ಖಾಸಗಿ ಕ್ಲಿನಿಕ್ ನಡೆಸುತ್ತಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಸರ್ಕಾರ ಸದ್ಯದಲ್ಲಿಯೇ ಅಂತಹ ಸರ್ಕಾರಿ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಬಿ ಶ್ರೀರಾಮುಲು, ಉಪ ಚುನಾವಣೆಯಲ್ಲಿ 15 ಸ್ಥಾನಗಳನ್ನು ಗೆಲ್ಲುತ್ತೇವೆ ಎಂಬ ವಿಶ್ವಾಸ ನಮಗೆ ಇದೆ. ನನಗೆ ಹಲವು ಉಪ ಚುನಾವಣೆ ನಡೆಸಿದ ಅನುಭವ ಇದೆ. ಸರ್ಕಾರದ ಪರ ಜನರ ಒಲವು ಯಾವಾಗ್ಲೂ ಇದ್ದೇ ಇರುತ್ತದೆ. ಹೀಗಾಗಿ ರಾಜ್ಯದ ಉಪ ಚುನಾವಣೆಯಲ್ಲಿ 15 ಸ್ಥಾನಗಳಲ್ಲಿ ಗೆಲುವನ್ನು ಸಾಧಿಸುವ ವಿಶ್ವಾಸ ಇದೆ ಎಂದು ತಿಳಿಸಿದರು.
ಇನ್ನೂ ಮುಂದುವರೆದು ಮಾತನಾಡಿದ ಅವರು, ರಾಜ್ಯ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ನೀಗಿಸುವಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯರ ಹುದ್ದೆಗಳನ್ನು ಸದ್ಯದಲ್ಲಿಯೇ ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತದೆ. ಮೂರು ತಿಂಗಳ ಒಳಗೆ ಸರ್ಕಾರಿ ವೈದ್ಯರ ಕೊರತೆಯನ್ನು ನೀಗಿಸಲಾಗುತ್ತದೆ ಎಂದು ಹೇಳಿದರು.
ರಾಜ್ಯದ ಅನೇಕ ಕಡೆಯಲ್ಲಿ ಸರ್ಕಾರಿ ವೈದ್ಯರು ಖಾಸಗಿ ಕ್ಲಿನಿಕ್ ತೆರೆದು ನಡೆಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಇದರ ಬಗ್ಗೆ ವರದಿ ತರಿಸಿಕೊಳ್ಳುತ್ತೇನೆ. ಆನಂತ್ರ ಸರ್ಕಾರಿ ವೈದ್ಯರು ಖಾಸಗಿ ಕ್ಲಿನಿಕ್ ತೆರದು ನಡೆಸುತ್ತಿರುವವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತದೆ. ಸದ್ಯದಲ್ಲಿಯೇ ಈ ಬಗ್ಗೆ ಸರ್ಕಾರ ಕ್ರಮವನ್ನು ಕೈಗೊಳ್ಳಲಾಗುತ್ತದೆ ಎಂದು ಖಾಸಗಿ ಕ್ಲಿನಿಕ್ ತೆರೆದು ನಡೆಸುತ್ತಿರುವ ಸರ್ಕಾರಿ ವೈದ್ಯರಿಗೆ ಎಚ್ಚರಿಕೆ ನೀಡಿದರು.
