ಬೆಳೆಹಾನಿ, ಮನೆ ಕಳೆದುಕೊಂಡವರಿಗೆ ಸೂಕ್ತ ಪರಿಹಾರ ಕೊಡುವೆ’ : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ -Vishwanews24
ಬೆಳೆಹಾನಿ, ಮನೆ ಕಳೆದುಕೊಂಡವರಿಗೆ ಸೂಕ್ತ ಪರಿಹಾರ ಕೊಡುವೆ’ : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ -Vishwanews24
ಬಾಗಲಕೋಟೆ/ಬೆಳಗಾವಿ: ‘ಸೆಪ್ಟೆಂಬರ್ 12ರ ನಂತರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಪ್ರವಾಹ ಸಂತ್ರಸ್ತರಿಗೆ ನೆರವಾಗಲು ಕೇಂದ್ರದಿಂದ ಹೆಚ್ಚಿನ ನೆರವು ಕೋರಲಿದ್ದೇನೆ. ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಪ್ರವಾಹದಿಂದ ಸಂಕಷ್ಟಕ್ಕೀಡಾದವರಿಗೆ ಸಾಲ ತಂದಾದರೂ ನೆರವಾಗುತ್ತೇನೆ. ಬೆಳೆಹಾನಿ, ಮನೆ ಕಳೆದುಕೊಂಡವರಿಗೆ ಸೂಕ್ತ ಪರಿಹಾರ ಕೊಡುವೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದರು.
ಆಲಮಟ್ಟಿಯಲ್ಲಿ ಮಂಗಳವಾರ ಕೃಷ್ಣೆಗೆ ಬಾಗಿನ ಅರ್ಪಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
‘ಕೋವಿಡ್ ಕಾರಣದಿಂದ ರಾಜ್ಯ ಹಾಗೂ ಕೇಂದ್ರದ ಹಣಕಾಸಿನ ಸ್ಥಿತಿ ಸರಿ ಇಲ್ಲ. ಅಂತಹ ಪರಿಸ್ಥಿತಿಯಲ್ಲೂ ಕೇಂದ್ರದಿಂದ ಹೆಚ್ಚಿನ ಅನುದಾನ ತರಲು ಪ್ರಯತ್ನಿಸುತ್ತಿದ್ದೇನೆ. ಜಿಎಸ್ಟಿಗೆ ಸಂಬಂಧಿಸಿದಂತೆ ರಾಜ್ಯದ ಪಾಲಿನ ₹13 ಸಾವಿರ ಕೋಟಿ ಪಡೆಯಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಚರ್ಚಿಸಿದ್ದೇನೆ. ಆಗಸ್ಟ್ 27ರಂದು ನಡೆಯಲಿರುವ ಜಿಎಸ್ಟಿ ಮಂಡಳಿ ಸಭೆಯಲ್ಲಿ ಆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತಿದೆ. 2–3 ತಿಂಗಳಲ್ಲಿ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯೂ ಕಾಣಬಹುದು’ ಎಂಬ ಆಶಾಭಾವ ವ್ಯಕ್ತಪಡಿಸಿದರು.
‘ಕೋವಿಡ್ ಚಿಕಿತ್ಸೆಗೆ ಔಷಧ ಖರೀದಿ ವಿಚಾರದಲ್ಲಿ ವಿರೋಧ ಪಕ್ಷದವರ ಆಗ್ರಹದಂತೆ ಶ್ವೇತಪತ್ರ ಹೊರಡಿಸುವ ಅಗತ್ಯವಿಲ್ಲ. ಮುಂಬರುವ ಅಧಿವೇಶನದಲ್ಲಿ ಅವರ ಎಲ್ಲ ಆರೋಪಗಳಿಗೂ ಸಮರ್ಥ ಉತ್ತರ ನೀಡಲಾಗುವುದು’ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
