ರಾಜ್ಯಾದ್ಯಂತ ಆಹಾರ ತಯಾರಿಕಾ ಕೇಂದ್ರಗಳ ತಪಾಸಣೆ: ನಿಯಮ ಮೀರಿದರೆ ಕಠಿಣ ಕ್ರಮದ ಎಚ್ಚರಿಕೆ -vishwanews24
ರಾಜ್ಯಾದ್ಯಂತ ಆಹಾರ ತಯಾರಿಕಾ ಕೇಂದ್ರಗಳ ತಪಾಸಣೆ: ನಿಯಮ ಮೀರಿದರೆ ಕಠಿಣ ಕ್ರಮದ ಎಚ್ಚರಿಕೆ
ಮಂಗಳೂರು: ರಾಜ್ಯದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಆಹಾರ ಇಲಾಖೆಯು ಕಾರ್ಯಾಚರಣೆಯನ್ನು ಚುರುಕುಗೊಳಿಸಿದ್ದು, ಈಗಾಗಲೇ ಹಲವು ಆಹಾರ ತಯಾರಿಕಾ ಕೇಂದ್ರಗಳಿಗೆ ನೋಟಿಸ್ ಜಾರಿ ಮಾಡಿದೆ. ಈ ತಪಾಸಣಾ ಅಭಿಯಾನವು ಕೇವಲ ಬೆಂಗಳೂರಿಗೆ ಮಾತ್ರ ಸೀಮಿತವಾಗಿರದೆ, ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಬುಧವಾರ ಹೇಳಿದರು.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಹಾರ ಇಲಾಖೆಯು ಸಾರ್ವಜನಿಕರ ಅನುಕೂಲಕ್ಕಾಗಿ ಈಗಾಗಲೇ ಕ್ಯೂಆರ್ ಕೋಡ್ ವ್ಯವಸ್ಥೆಯನ್ನು ಅಳವಡಿಸಿದ್ದು, ಇದರ ಮೂಲಕ ಸಾರ್ವಜನಿಕರಿಂದ ಬರುವ ದೂರುಗಳನ್ನಾಧರಿಸಿ ನೇರ ತಪಾಸಣೆ ನಡೆಸಲಾಗುತ್ತಿದೆ. ಮಂಗಳೂರಿನಲ್ಲಿ ಕ್ಯೂಆರ್ ಕೋಡ್ ಮೂಲಕ ಬಂದ ದೂರಿನನ್ವಯ ಈಗಾಗಲೇ ಎರಡು ಪ್ರಮುಖ ಮಳಿಗೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ತಪಾಸಣೆಗೊಳಪಡಿಸಿದ್ದಾರೆ ಎಂದರು.
ಮುಂಬರುವ ದಿನಗಳಲ್ಲಿ ರಾಜ್ಯದ ಎಲ್ಲಾ ಪಿಜಿಗಳಿಗೂ ಕಡ್ಡಾಯವಾಗಿ ಶುಚಿತ್ವ ಹಾಗೂ ಆಹಾರದ ಗುಣಮಟ್ಟವನ್ನು ಕಾಯ್ದುಕೊಳ್ಳಲು ಸೂಚಿಸಲಾಗಿದೆ. ಇದನ್ನು ಪಾಲಿಸದಿದ್ದಲ್ಲಿ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
