ಅಭಿನಯ ಶಾರದೆ ಜಯಂತಿ ನಿಧನಕ್ಕೆ ಗಣ್ಯರ, ಅಭಿಮಾನಿಗಳ ಸಂತಾಪ -Vishwanews24

Featured, ರಾಜ್ಯ ನ್ಯೂಸ್

ಅಭಿನಯ ಶಾರದೆ ಜಯಂತಿ ನಿಧನಕ್ಕೆ ಗಣ್ಯರ, ಅಭಿಮಾನಿಗಳ ಸಂತಾಪ -Vishwanews24

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ ಜಯಂತಿ ಅವರು ಇಂದು ಕೊನೆಯುಸಿರೆಳೆದಿದ್ದು, ಅಭಿನಯ ಶಾರದೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಚಿವರಾದ ಬಸವರಾಜ ಬೊಮ್ಮಾಯಿ, ಬಿ.ಸಿ ಪಾಟೀಲ್, ನಟ ಜಗ್ಗೇಶ್​, ನಿರ್ದೇಶಕ ಪವನ್ ಒಡೆಯರ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಟ್ವೀಟ್​ ಮಾಡಿರುವ ಸಿಎಂ ಯಡಿಯೂರಪ್ಪ ಅವರು, ಪ್ರಖ್ಯಾತ ಹಿರಿಯ ಕಲಾವಿದೆ, ಅಭಿನಯ ಶಾರದೆ ಜಯಂತಿ ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರವಾಗಿದ್ದು, ಕನ್ನಡ ಕಲಾಲೋಕಕ್ಕೆ ತುಂಬಲಾರದ ನಷ್ಟವುಂಟಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ, ಅವರ ಕುಟುಂಬ, ಅಪಾರ ಅಭಿಮಾನಿ ಬಳಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ, “ಅಭಿಜಾತ ಪ್ರತಿಭೆಯ ಮೂಲಕ ದಶಕಗಳ ಕಾಲ ಚಿತ್ರಪ್ರೇಮಿಗಳ ಮನಗೆದ್ದಿದ್ದ ಮತ್ತು ನನ್ನ ಇಷ್ಟದ ನಟಿ ಅಭಿನಯ ಶಾರದೆ ಜಯಂತಿಯವರ ನಿಧನದಿಂದ ಅತೀವ ದುಃಖವಾಗಿದೆ. ಜಯಂತಿ ಅವರು ತಮ್ಮ ಚಿತ್ರಗಳ ಮೂಲಕ ಸದಾಕಾಲ ನಮ್ಮೆಲ್ಲರ ಮನದಲ್ಲಿ ಅಜರಾಮಾರರಾಗಿ ಇರುತ್ತಾರೆ. ಅವರ ಕುಟುಂಬಕ್ಕೆ ನನ್ನ ಸಾಂತ್ವನಗಳು” ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ಕನ್ನಡ ಚಿತ್ರರಂಗದ ಹಿರಿಯ ಕಲಾವಿದೆ, ಅಭಿನಯ ಶಾರದೆ ಜಯಂತಿ ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರವಾಗಿದ್ದು, ಕಲಾರಂಗಕ್ಕೆ ತುಂಬಲಾರದ ನಷ್ಟವುಂಟಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ, ಅವರ ಕುಟುಂಬ ಹಾಗೂ ಅಭಿಮಾನಿ ಬಳಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.