ಅ.31ರಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ ಸ್ನೇಹ ಸಮಾವೇಶ : ಪ್ರಶಸ್ತಿ ಪ್ರದಾನ ಸಮಾರಂಭ – vishwanews24
ಅ.31ರಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ ಸ್ನೇಹ ಸಮಾವೇಶ; ಪ್ರಶಸ್ತಿ ಪ್ರದಾನ ಸಮಾರಂಭ
ಉಡುಪಿ : ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಸ್ನೇಹ ಸಮಾವೇಶ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭವು ಅ.31ರಂದು ಸಂಜೆ 6:30ಕ್ಕೆ ಉಡುಪಿ ಮಿಷನ್ ಕಂಪೌಂಡ್ನ ಯುಬಿಎಂಸಿ ಆಡಿಟೋರಿಯಂನಲ್ಲಿ ನಡೆಯಲಿದೆ.
ಉಡುಪಿ ಪತ್ರಿಕಾ ಭವನದಲ್ಲಿ ಗುರುವಾರ ಕರೆದ ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಜಿಲ್ಲಾಧ್ಯಕ್ಷ ಮುಹಮ್ಮದ್ ಮೌಲಾ ಹಾಗೂ ನಿಕಟಪೂರ್ವ ಅಧ್ಯಕ್ಷ ಯಾಸೀನ್ ಮಲ್ಪೆ ಈ ಕುರಿತು ಮಾಹಿತಿ ನೀಡಿದರು.
ರಾಜ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆ ಸಚಿವರು ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ರಿಝ್ವಾನ್ ಅರ್ಷದ್ ಪ್ರಶಸ್ತಿ ಪ್ರದಾನ ಮಾಡಲಿರುವರು. ಕಾರ್ಯಕ್ರಮವನ್ನು ದ.ಕ. ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹೀಂ ಉದ್ಘಾಟಿಸುವರು. ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ಮೌಲಾ ಅಧ್ಯಕ್ಷತೆ ವಹಿಸುವರು. ಕರ್ನಾಟಕ ರಾಜ್ಯ ಮುಸ್ಲಿಮ್ ಒಕ್ಕೂಟದ ಸಂಚಾಲಕ ಮುಹಮ್ಮದ್ ಯಾಸೀನ್ ಮಲ್ಪೆ ಆಶಯ ಮತ್ತು ಅಭಿನಂದನಾ ಭಾಷಣ ಮಾಡಲಿರುವರು.
ಇದನ್ನೂ ಓದಿ :
ರೈಲುಗಳಲ್ಲಿ ರಾತ್ರಿ ಮೊಬೈಲ್ ಚಾರ್ಜಿಂಗ್ ನಿಷೇಧ: ರೈಲ್ವೆ ಮಂಡಳಿ ಆದೇಶ – vishwanews24
ಈ ಸಂದರ್ಭದಲ್ಲಿ ಸಾಮಾಜಿಕ ಹೋರಾಟಗಾರ, ನಟ ಪ್ರಕಾಶ್ ರಾಜ್ ಅವರಿಗೆ ‘ಮಾನವ ರತ್ನ’, ದುಬೈಯ ಉದ್ಯಮಿ ಹಿದಾಯತುಲ್ಲಾ ಅಬ್ಬಾಸ್ ಅವರಿಗೆ ‘ಸೇವಾ ರತ್ನ’, ಬರಹಗಾರ ಮತ್ತು ಸಾಮಾಜಿಕ ಹೋರಾಟಗಾರ ಸುರೇಶ್ ಭಟ್ ಬಾಕ್ರಬೈಲ್ ಅವರಿಗೆ ‘ಸೌಹಾರ್ದ ರತ್ನ’ಪ್ರಶಸ್ತಿ ಪ್ರದಾನ ಮಾಡಲಾಗುವುದು. ಇವರಿಗೆ ಪ್ರಶಸ್ತಿ ಫಲಕದ ಜೊತೆ ತಲಾ 50 ಸಾವಿರ ರೂ. ನಗದು ಪುರಸ್ಕಾರ ನೀಡಲಾಗುವುದು.
ಅದೇ ರೀತಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಮಾಜಿಕ ಕಾರ್ಯಕರ್ತರುಗಳಾದ ಇಬ್ರಾಹೀಂ ಸಾಹೇಬ್ ಹಂಗಾರಕಟ್ಟೆ, ಬಿಪಿನ್ ಚಂದ್ರಪಾಲ್ ಕಾರ್ಕಳ, ಜೆರಾಲ್ಡ್ ಪಿಂಟೋ ಉಡುಪಿ, ಚಂದ್ರಶೇಖರ್ ಶೆಟ್ಟಿ ಕುಂದಾಪುರ, ಸಾಮಾಜಿಕ ಹೋರಾಟಗಾರ್ತಿ ಗೀತಾ ಸುರೇಶ್ ಕುಮಾರ್ ಬೈಂದೂರು, ಲೇಖಕಿ ಫಾತಿಮಾ ರಲಿಯಾ ಹೆಜಮಾಡಿಯವರನ್ನು ಸನ್ಮಾನಿಸಲಾಗುವುದು ಎಂದವರು ತಿಳಿಸಿದರು.
ಇದನ್ನೂ ಓದಿ :
ಕಾಸರಗೋಡು : ಲಾಡ್ಜ್ನಲ್ಲಿ ಎಂಡಿಎಂಎ ಪತ್ತೆ: ಇಬ್ಬರ ಬಂಧನ – vishwanews24
ಅತಿಥಿಗಳಾಗಿ ಭಾರತ್ ಸ್ಕೌಟ್ಸ್ ಆಂಡ್ ಗೈಡ್ಸ್ ನ ಮುಖ್ಯ ಜಿಲ್ಲಾ ಆಯುಕ್ತ ಜಯಕರ ಶೆಟ್ಟಿ ಇಂದ್ರಾಳಿ, ದ.ಕ.- ಉಡುಪಿ ಜಿಲ್ಲಾ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್, ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಗೌರವಾಧ್ಯಕ್ಷ ದಿವಾಕರ ಸನಿಲ್, ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮುನಿಯಾಲು, ಉಡುಪಿ ಸಹಬಾಳ್ವೆ ಸಂಚಾಲಕ ಪ್ರೊ.ಫಣಿರಾಜ್, ದಸಂಸ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಎಸ್ಡಿಪಿಐ ಜಿಲ್ಲಾಧ್ಯಕ್ಷ ಆಸೀಫ್ ಕೋಟೇಶ್ವರ್, ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ್, ದ.ಕ. ಮತ್ತು ಉಡುಪಿ ಜಿಲ್ಲಾ ಮುಸ್ಲಿಮ್ ಸೆಂಟ್ರಲ್ ಕಮಿಟಿಯ ಉಪಾಧ್ಯಕ್ಷ ಕೆ.ಅಶ್ರಫ್, ತೀರ್ಥಹಳ್ಳಿ ಮುಸ್ಲಿಮ್ ಒಕ್ಕೂಟದ ಹಾಜಿ ಸುಲೈಮಾನ್ ಸಾಹೇಬ್, ನಾರ್ತ್ ಕೆನರಾ ಮುಸ್ಲಿಮ್ ಯುನೈಟೆಡ್ ಫೋರಂನ ಇಮ್ತಿಯಾಝ್ ಅಹ್ಮದ್ ಉಮರ್ ಶೇಖ್ ಭಾಗವಹಿಸಲಿರುವರು ಎಂದು ಅವರು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಇಸ್ಮಾಯೀಲ್ ಹುಸೈನ್ ಕಟಪಾಡಿ, ಕಾರ್ಯಕ್ರಮದ ಸಂಚಾಲಕ ಮೌಲಾನ ಝಮೀರ್ ಅಹ್ಮದ್ ರಶಾದಿ, ಸಹಸಂಚಾಲಕ ಪೀರು ಸಾಹೇಬ್, ಮಾಧ್ಯಮ ವಕ್ತಾರ ಇಕ್ಬಾಲ್ ಮನ್ನಾ ಉಪಸ್ಥಿತರಿದ್ದರು.
