ಆಸ್ಪತ್ರೆಯಿಂದ ಡಿಕೆ ಶಿವಕುಮಾರ್ ತಿಹಾರ್ ಜೈಲಿಗೆ ಶಿಫ್ಟ್‌ -Vishwanews24

Featured, ರಾಷ್ಟ್ರ ನ್ಯೂಸ್

ನವದೆಹಲಿ: ಅಕ್ರಮ ಆಸ್ತಿ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ರಕ್ತದೊತ್ತಡ, ಹೃದಯ ಸಂಬಂಧ ತೊಂದರೆಯಿಂದ ಬಳಲುತ್ತಿದ್ದ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರನ್ನು  ದೆಹಲಿಯ ಆರ್‌ಎಂಎಲ್ ಆಸ್ಪತ್ರೆಯಿಂದ ತಿಹಾರ್ ಜೈಲಿಗೆ ಕರೆದೊಯ್ಯಲಾಗಿದೆ.

ಡಿ.ಕೆ. ಶಿವಕುಮಾರ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಧೀಶ ಅಜಯ್​ ಕುಮಾರ್ ಕುಹಾರ್ ಆದೇಶ ನೀಡಿದ್ದರು. ಆದರೆ ತೀವ್ರ ರಕ್ತದೊತ್ತಡ ಹಾಗೂ ಹೃದಯ ಬೇನೆಯಿಂದ ಬಳಲುತ್ತಿದ್ದ ಡಿಕೆಶಿ ಅವರನ್ನು ದೆಹಲಿಯ ಡಾ. ರಾಮಮನೋಹರ ಲೋಹಿಯಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ ಡಿ.ಕೆ. ಶಿವಕುಮಾರ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ವರದಿ ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ತಿಹಾರ್ ಜೈಲಿಗೆ ಕರೆದೊಯ್ದಿದ್ದಾರೆ.

ಮಂಗಳವಾರದಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ಡಾ. ರಾಮಮನೋಹರ ಲೋಹಿಯಾ ಆಸ್ಪತ್ರೆ ವೈದ್ಯಾಧಿಕಾರಿಗಳು ಹಾಗೂ ತಿಹಾರ್ ಜೈಲು ಉಸ್ತುವಾರಿಯನ್ನೂ ಹೊಂದಿರುವ ದೆಹಲಿ ಪೊಲೀಸರ ಥರ್ಡ್ ಬಟಾಲಿಯನ್ ಅಧಿಕಾರಿಗಳಿಗೆ ಡಿ.ಕೆ. ಶಿವಕುಮಾರ್ ಅವರ ಆರೋಗ್ಯದ ಕಡೆ ಗಮನ ಹರಿಸಬೇಕೆಂದು ನ್ಯಾಯಾಧೀಶ ಅಜಯ್ ಕುಮಾರ್ ಕುಹರ್ ಸೂಚನೆ ನೀಡಿದ್ದರು. ಡಿ.ಕೆ. ಶಿವಕುಮಾರ್ ಅವರಿಗೆ ರಕ್ತದ ಒತ್ತಡ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಡಾ. ರಾಮಮನೋಹರ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಮುಂದುವರೆಸಲಾಗಿತ್ತು. ಆದರೆ ಇಂದು ಬೆಳಿಗ್ಗೆ ಆರೋಗ್ಯ ತಪಾಸಣೆ ಬಳಿಕ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ವರದಿ ನೀಡಿರುವ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಜೈಲಿಗೆ ಶಿಫ್ಟ್ ಮಾಡಲಾಗಿದೆ.