ಇಡೀ ರಾಜ್ಯ ಅತಿವೃಷ್ಟಿಯಿಂದ ತತ್ತರಿಸಿಹೋಗಿದೆ , ಇತ್ತ ಸರಕಾರ ಬೆಂಗಳೂರು ಗಲಭೆಯ ಬೆಂಕಿಯಲ್ಲಿ ರಾಜಕೀಯ ರೊಟ್ಟಿ ಬಡಿಯುತ್ತಾ ಕೂತಿದೆ : ಸಿದ್ದರಾಮಯ್ಯ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು : ಇಡೀ ರಾಜ್ಯ ಅತಿವೃಷ್ಟಿಯಿಂದ ತತ್ತರಿಸಿ ಹೋಗಿದ್ದಾರೆ ಇತ್ತ ಸರಕಾರ ಬೆಂಗಳೂರು ಗಲಭೆಯ ಬೆಂಕಿಯಲ್ಲಿ ರಾಜಕೀಯ ರೊಟ್ಟಿ ಬಡಿಯುತ್ತಾ ಕೂತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ.

ಬೆಂಗಳೂರು ಗಲಭೆ ವಿಚಾರದಲ್ಲಿ ಕಾಂಗ್ರೆಸ್,‌ ಬಿಜೆಪಿ ನಡುವೆ ನಡೆಯುತ್ತಿರುವ ವಾಕ್ಸಮರ ಮುಂದುವರೆದಿದ್ದು ಸರ್ಕಾರದ ವಿರುದ್ದ ಮತ್ತೆ ಚಾಟಿ ಬೀಸಿರುವ ಸಿದ್ದರಾಮಯ್ಯ ಅವರು, ”ಇಡೀ ರಾಜ್ಯ ಅತಿವೃಷ್ಟಿಯಿಂದ ತತ್ತರಿಸಿಹೋಗಿದೆ. ಬಿಜೆಪಿ ಸರ್ಕಾರ ಬೆಂಗಳೂರು ಗಲಭೆಯ ಬೆಂಕಿಯಲ್ಲಿ ರಾಜಕೀಯದ ರೊಟ್ಟಿ ಬಡಿಯುತ್ತಾ ಕೂತಿದೆ. ನೊಂದ ಜನರ ಗೋಳು ಅರಣ್ಯರೋದನ. ಅತಿವೃಷ್ಟಿಯ ಪರಿಹಾರದಲ್ಲಿ ಕಳೆದ ವರ್ಷದ ವೈಫಲ್ಯ. ಈ ಬಾರಿ ಜನರ ಕಷ್ಟ-ಕಾರ್ಪಣ್ಯಗಳನ್ನು ದುಪ್ಪಟ್ಟುಗೊಳಿಸಿದೆ” ಎಂದು ಹೇಳಿದ್ದಾರೆ.

”ಗೃಹಸಚಿವರು ಅತಿವೃಷ್ಟಿ ಸಮೀಕ್ಷೆಗೆ ಪ್ರವಾಸ ಮಾಡುತ್ತಿದ್ದಾರೆ, ಕಂದಾಯ ಸಚಿವರು ಬೆಂಗಳೂರಿನಲ್ಲಿ ಕೂತು ಕಾವಲಭೈರಸಂದ್ರ ಗಲಭೆ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ. ಕಂದಾಯ ಸಚಿವರಿಗೆ ಬೆಂಗಳೂರಿನಲ್ಲೇನು ಕೆಲಸ?” ಎಂದು ಪ್ರಶ್ನಿಸಿರುವ ಅವರು, ”ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರೇ, ಮೊದಲು ಇವರನ್ನು ಪ್ರವಾಹಪೀಡಿತ ಪ್ರದೇಶಕ್ಕೆ ಕಳಿಸಿಕೊಡಿ” ಎಂದು ಹೇಳಿದ್ದಾರೆ.