ಉಡುಪಿ : ಅಕ್ರಮವಾಗಿ ನೆಲೆಸಿದ್ದ 10  ಬಾಂಗ್ಲಾ ಪ್ರಜೆಗಳ ಗಡಿಪಾರು ಪ್ರಕ್ರಿಯೆಗೆ ಚಾಲನೆ -vishwanews24

Featured, ಉಡುಪಿ

ಉಡುಪಿ : ಅಕ್ರಮವಾಗಿ ನೆಲೆಸಿದ್ದ 10  ಬಾಂಗ್ಲಾ ಪ್ರಜೆಗಳ ಗಡಿಪಾರು ಪ್ರಕ್ರಿಯೆಗೆ ಚಾಲನೆ

ಉಡುಪಿ : ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿದ್ದ 10 ಮಂದಿ ಬಾಂಗ್ಲಾದೇಶದ ಪ್ರಜೆಗಳ ಶಿಕ್ಷೆಯ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ, ಅವರನ್ನು ಸ್ವದೇಶಕ್ಕೆ ಗಡಿಪಾರು ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.

2024ರ ಅಕ್ಟೋಬರ್ 11ರಂದು ವಡಬಾಂಡೇಶ್ವರ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ಕಂಡುಬಂದಿದ್ದ ಈ 10 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಅವರು ಅಕ್ರಮವಾಗಿ ಭಾರತದಲ್ಲಿ ನೆಲೆಸಿರುವುದು ಪತ್ತೆಯಾಗಿತ್ತು. ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು 2025ರ ಡಿಸೆಂಬರ್ 8ರಂದು ಆರೋಪಿಗಳಿಗೆ ತಲಾ ಎರಡು ವರ್ಷಗಳ ಜೈಲು ಶಿಕ್ಷೆ ಹಾಗೂ ತಲಾ 10 ಸಾವಿರ ರೂ. ದಂಡ ವಿಧಿಸಿತ್ತು.

ಅವರ ಶಿಕ್ಷೆಯ ಅವಧಿ 2026ರ ಅಕ್ಟೋಬರ್ 10ರಂದು ಪೂರ್ಣಗೊಂಡಿದ್ದು, ಕೇಂದ್ರ ಗೃಹ ಸಚಿವಾಲಯ ಹಾಗೂ ಪ್ರಾದೇಶಿಕ ವಿದೇಶಿಯರ ನೋಂದಣಾಧಿಕಾರಿ, ಬೆಂಗಳೂರು ಇವರ ಆದೇಶದಂತೆ ಗಡಿಪಾರು ಪ್ರಕ್ರಿಯೆ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ 10 ಮಂದಿಯನ್ನು ಪೊಲೀಸ್ ಭದ್ರತೆಯಲ್ಲಿ ನ.23ರಂದು ಉಡುಪಿಯಿಂದ ರೈಲಿನ ಮೂಲಕ ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿರುವ ಬಿಎಸ್‌ಎಫ್ ಅಧಿಕಾರಿಗಳ ಮುಂದೆ ಹಾಜರುಪಡಿಸಲು ಕರೆದೊಯ್ಯಲಾಗಿದೆ. ಅಲ್ಲಿಂದ ಭಾರತದಿಂದ ಗಡಿಪಾರು ಮಾಡುವ ಮುಂದಿನ ಪ್ರಕ್ರಿಯೆ ನಡೆಯಲಿದೆ.

Leave a Reply