ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ – vishwanews24

Featured, ಉಡುಪಿ

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ

ಉಡುಪಿ : ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 94% ಫಲಿತಾಂಶದೊಂದಿಗೆ ಉಡುಪಿ ಜಿಲ್ಲೆಯು ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದ ಹಿನ್ನೆಲೆಯಲ್ಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಜಿಲ್ಲೆಗೆ ಅಭಿನಂದನೆ ಸಲ್ಲಿಸಿದ್ದಾರೆ.

ಉಡುಪಿ ಜಿಲ್ಲೆಯ ಶೈಕ್ಷಣಿಕ ಪ್ರಗತಿಯ ಕುರಿತು ಮಾತನಾಡಿದ ಅವರು, “ಕರಾವಳಿ ಜಿಲ್ಲೆಯಾದ ಉಡುಪಿ ಶೈಕ್ಷಣಿಕವಾಗಿ ಯಾವಾಗಲೂ ಮುಂಚೂಣಿಯಲ್ಲಿರುವ ಜಿಲ್ಲೆ. ಕೇವಲ ಜಿಲ್ಲೆಯವರಷ್ಟೇ ಅಲ್ಲದೆ, ಹೊರ ಜಿಲ್ಲೆಗಳ ವಿದ್ಯಾರ್ಥಿಗಳೂ ಶಿಕ್ಷಣಕ್ಕಾಗಿ ಉಡುಪಿಯನ್ನು ನೆಚ್ಚಿಕೊಂಡಿದ್ದಾರೆ. ಜಿಲ್ಲೆಯ ಈ ಸಾಧನೆ ನಿಜಕ್ಕೂ ಶ್ಲಾಘನೀಯ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

“ಜಿಲ್ಲೆಯು ದ್ವಿತೀಯ ಸ್ಥಾನ ಗಳಿಸಲು ಕಾರಣರಾದ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಎಲ್ಲಾ ಶಾಲೆಗಳು ಮತ್ತು ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಿರಲಿ” ಎಂದು ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ, ಕುಂದಾಪುರದ ಶಂಕರನಾರಾಯಣದ ಮದರ್ ತೆರೇಸಾ ಇಂಗ್ಲಿಷ್ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರೀತಮ್ ಜಿ. ಪೂಜಾರಿ, ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಕ್ಕಾಗಿ ಸಚಿವರು ವಿಶೇಷ ಅಭಿನಂದನೆಗಳನ್ನು ಸಲ್ಲಿಸಿದರು.

Leave a Reply