ಕಾಪು :ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆ ಪೀಡಿತ ಪ್ರದೇಶಗಳಿಗೆ ಉಡುಪಿ ಜಿಲ್ಲಾಧಿಕಾರಿ ಭೇಟಿ -Vishwanews24
ಕಾಪು: ಕ್ಷೇತ್ರದ ಸಮಗ್ರ ಅಭಿವೃದ್ಧಿ ಚಿಂತನೆಯೊಂದಿಗೆ ಯೋಜನಾ ಪಟ್ಟಿ ಸಹಿತವಾದ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಿದ್ದು, ಅದಕ್ಕೆ ಪೂರಕವಾಗಿ ಜಿಲ್ಲಾಡಳಿತ ಸ್ಪಂದಿಸಲಿದೆ. ಪೂರ್ವ ಭಾವಿಯಾಗಿ ಶಾಸಕರು ಸೂಚಿಸಿದ ಪ್ರದೇಶಗಳಿಗೆ ತೆರಳಿ ಪರಿಶೀಲನ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಹೇಳಿದರು.
ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧೆಡೆಗಳಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆ ಪೀಡಿತ ಪ್ರದೇಶಗಳಿಗೆ ಶಾಸಕ ಲಾಲಾಜಿ ಆರ್. ಮೆಂಡನ್ ಅವರ ಅಪೇಕ್ಷೆಯ ಮೇರೆಗೆ ಭೇಟಿ ನೀಡಿ, ಅಭಿವೃದ್ಧಿ ಕಾಮಗಾರಿ ಮತ್ತು ಸಮಸ್ಯೆಗಳನ್ನು ಪರಿಶೀಲನೆ ನಡೆಸಿ, ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ತಾಲೂಕಿನ ವಿವಿಧ ಪ್ರದೇಶಗಳಿಗೆ ತೆರಳಿ ಸ್ಥಳ ಪರಿಶೀಲನೆ ನಡೆಸಲಾಗಿದೆ. ಯಾವುದೆಲ್ಲಾ ಕೆಲಸಗಳನ್ನು ತುರ್ತಾಗಿ ನಡೆಸಬೇಕು, ಯಾವುದಕ್ಕೆ ಪ್ರಥಮ ಆದ್ಯತೆ ಕೊಡಬೇಕು ಎನ್ನುವುದರ ಬಗ್ಗೆ ಅಧಿಕಾರಿಗಳು, ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಸರಕಾರಕ್ಕೆ ವರದಿ ನೀಡಲಾಗುವುದು ಎಂದರು.
ಹೆದ್ದಾರಿ ಸಮಸ್ಯೆ ಬಗ್ಗೆ ವಿಶೇಷ ಸಭೆ ನಡೆಸಿ ಕ್ರಮ ರಾಷ್ಟ್ರೀಯ ಹೆದ್ದಾರಿ 66ರ ಕಾಮಗಾರಿಯಲ್ಲಿನ ಅಸ್ತವ್ಯಸ್ತತೆ, ಇದರಿಂದ ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆಗಳು ಮತ್ತು ಸಮಸ್ಯೆಗಳ ಬಗ್ಗೆ ಹಲವಾರು ರೀತಿಯ ಮನವಿಗಳು ಮತ್ತು ದೂರುಗಳು ಸಾರ್ವಜನಿಕರಿಂದ ಕೇಳಿ ಬಂದಿವೆ. ಈಗಾಗಲೇ ಈ ಬಗ್ಗೆ ಜನಪ್ರತಿನಿಧಿಗಳು, ಸ್ಥಳೀಯರು ಮತ್ತು ಹೆದ್ದಾರಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ ಎಂದರು.
ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಜಿ.ಪಂ. ಸದಸ್ಯೆ ಶಿಲ್ಪಾ ಜಿ. ಸುವರ್ಣ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ತಹಶೀಲ್ದಾರ್ ಮಹಮ್ಮದ್ ಇಸಾಕ್, ಪುರಸಬಾ ಮುಖ್ಯಾಧಿಕಾರಿ ರಾಯಪ್ಪ, ಕಂದಾಯ ನಿರೀಕ್ಷಕ ರವಿಶಂಕರ್ ಕೆ., ಪುರಸಭಾ ಸದಸ್ಯ ಅನಿಲ್ ಕುಮಾರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸುರೇಶ್ ಶೆಟ್ಟಿ ಗುರ್ಮೆ, ಕ್ಷೇತ್ರಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗಂಗಾಧರ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.
