ಗಂಗೊಳ್ಳಿಯ ಶ್ರೀ ಸರಸ್ವತಿ ವಿದ್ಯಾನಿಧಿ ವತಿಯಿಂದ ವಿದ್ಯಾರ್ಥಿವೇತನ ವಿತರಣಾ ಸಮಾರಂಭ

Featured, ಉಡುಪಿ

ಕುಂದಾಪುರ ; ಗಂಗೊಳ್ಳಿ : ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಒಂದು ಗುರಿಯನ್ನು ಇಟ್ಟುಕೊಂಡಿದ್ದು, ಆ ಗುರಿ ತಲುಪಲು ವಿದ್ಯಾರ್ಥಿವೇತನದ ಮೂಲಕ ಸಹಾಯ ಮಾಡಲಾಗುತ್ತಿದೆ. ವಿದ್ಯಾರ್ಥಿಗಳ ಸಂಪೂರ್ಣ ಶೈಕ್ಷಣಿಕ ವೆಚ್ಚವನ್ನು ಭರಿಸಲು ಸಾಧ್ಯವಾಗದಿದ್ದರೂ ಅವರ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಸಹಾಯಧನದ ರೂಪದಲ್ಲಿ ಕಳೆದ ಅನೇಕ ವರ್ಷಗಳಿಂದ ಪ್ರೋತ್ಸಾಹ ನೀಡಲಾಗುತ್ತಿದೆ. ಸಂಘ ಸಂಸ್ಥೆಗಳಿಂದ ವಿದ್ಯಾರ್ಥಿವೇತನ ರೂಪದಲ್ಲಿ ಪಡೆದುಕೊಂಡ ಹಣವನ್ನು ಸದ್ವಿನಿಯೋಗ ಪಡಿಸಿಕೊಂಡು ಸಮಾಜದಲ್ಲಿ ಉತ್ತಮ ಸ್ಥಾನಮಾನ ಪಡೆದುಕೊಳ್ಳಲು ಪ್ರಯತ್ನಿಸಬೇಕಿದೆ ಶ್ರೀ ಸರಸ್ವತಿ ವಿದ್ಯಾನಿಧಿ ಅಧ್ಯಕ್ಷ ಎನ್.ಸದಾಶಿವ ನಾಯಕ್ ಹೇಳಿದರು.

ಅವರು ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಗಂಗೊಳ್ಳಿಯ ಶ್ರೀ ಸರಸ್ವತಿ ವಿದ್ಯಾನಿಧಿ ಇವರ ಆಶ್ರಯದಲ್ಲಿ ಭಾನುವಾರ ಸಂಜೆ ಜರಗಿದ ವಿದ್ಯಾರ್ಥಿವೇತನ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೆನರಾ ಬ್ಯಾಂಕಿನ ನಿವೃತ್ತ ಚೀಫ್ ಮ್ಯಾನೇಜರ್ ಎಂ.ಜಿ.ಸುರೇಶ ಭಂಡಾರ್‍ಕಾರ್, ಸಮಾಜದ ಹಿರಿಯರು ಅಂದು ವಿದ್ಯಾರ್ಥಿವೇತನ ವಿತರಣೆ ಆರಂಭಿಸಿದ ಉದ್ದೇಶ ಹಾಗೂ ಇಚ್ಛೆಯಂತೆ ಕಾರ್ಯನಿರ್ವಹಿಸಬೇಕು. ಸಮಾಜದ ಅಗತ್ಯವುಳ್ಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುವ ಮೂಲಕ ಅವರ ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರ ನೀಡುವಂತಾಗಬೇಕು ಎಂದರು.

ಮುಖ್ಯ ಅತಿಥಿಯಾಗಿದ್ದ ಎನ್.ನಾಗೇಶ ನಾಯಕ್ ಮತ್ತು ಎಚ್.ಗಣೇಶ ಕಾಮತ್ ತ್ರಾಸಿ ಶುಭ ಹಾರೈಸಿದರು. ಇದೇ ಸಂದರ್ಭ ಅಬಾಕಸ್‍ನಲ್ಲಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಬಿ.ಪ್ರಸನ್ನಾ ಪೈ ಅವರನ್ನು ಸನ್ಮಾನಿಸಲಾಯಿತು. ಜಿಎಸ್‍ಬಿ ಸಮಾಜದ ಸುಮಾರು 19 ವಿದ್ಯಾರ್ಥಿಗಳಿಗೆ ಸುಮಾರು 1.26 ಲಕ್ಷ ರೂ.ಗಳ ವಿದ್ಯಾರ್ಥಿವೇತನವನ್ನು ವಿತರಿಸಲಾಯಿತು.

ಶ್ರೀ ಸರಸ್ವತಿ ವಿದ್ಯಾನಿಧಿ ಕಾರ್ಯದರ್ಶಿ ಕೆ.ರಾಮನಾಥ ನಾಯಕ್ ಸ್ವಾಗತಿಸಿದರು. ಸಂಸ್ಥೆಯ ಸ್ಥಾಪಕ ಸದಸ್ಯ ಡಾ.ಕಾಶೀನಾಥ ಪೈ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಜಿ.ವೆಂಕಟೇಶ ಶೆಣೈ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ಖಜಾಂಚಿ ಎನ್.ಅಶ್ವಿನ್ ನಾಯಕ್ ಸಹಕರಿಸಿದರು. ಎಂ.ಜಿ.ರಾಘವೇಂದ್ರ ಭಂಡಾರ್‍ಕಾರ್ ಸನ್ಮಾನಿತರನ್ನು ಪರಿಚಯಿಸಿದರು.