ಡಿ.ಕೆ.ಶಿವಕುಮಾರ್ ಸಿಎಂ : ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ : ಕೆ. ಕೃಷ್ಣಮೂರ್ತಿ ಆಚಾರ್ಯ – vishwanews24
ಡಿ.ಕೆ.ಶಿವಕುಮಾರ್ ಸಿಎಂ : ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ : ಕೆ. ಕೃಷ್ಣಮೂರ್ತಿ ಆಚಾರ್ಯ
ಉಡುಪಿ: ಕಾಂಗ್ರೆಸ್ ಪಕ್ಷದ ಅಜಾತಶತ್ರು ನಾಯಕ ಡಿ. ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುವ ಮೂಲಕ ಕರ್ನಾಟಕದಲ್ಲಿ ಅದರಲ್ಲೂ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಯುವಜನತೆಯಲ್ಲಿ ಹೊಸ ಹುರುಪಿನ ಅಲೆ ಎದ್ದಿದೆ. ಇದು ಎರಡೂ ಜಿಲ್ಲೆಗಳಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಉಡುಪಿ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಕೆ. ಕೃಷ್ಣಮೂರ್ತಿ ಆಚಾರ್ಯ ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ಸರಿಸಾಟಿ ಇಲ್ಲದಂತೆ ಸಂಘಟಿಸಿ, ಅಧಿಕಾರಕ್ಕೆ ತಂದ ಡಿ.ಕೆ.ಶಿವಕುಮಾರ್ ಅವರು ಇದೀಗ ಮುಖ್ಯಮಂತ್ರಿಯಾಗಿ ಸರ್ಕಾರವನ್ನು ಪುನಃರಚಿಸಿ ರಾಜ್ಯಕ್ಕೆ ಹೊಸ ಯೋಜನೆಗಳನ್ನು ನೀಡುವ ನಿರೀಕ್ಷೆ ಇದೆ.
ಸಿದ್ದರಾಮಯ್ಯ ಅವರು ಗ್ಯಾರಂಟಿಗಳ ಮೂಲಕ ರಾಜ್ಯದ ಅಭಿವೃದ್ಧಿಗೆ ಸುಭದ್ರ ಅಡಿಪಾಯ ಹಾಕಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ತಮ್ಮ ನೇರ ಮತ್ತು ದಿಟ್ಟ ಆಡಳಿತದ ಮೂಲಕ ರಾಜ್ಯದ ಅಭಿವೃದ್ಧಿಯಲ್ಲಿ ಹೊಸ ಎತ್ತರವನ್ನು ಸಾಧಿಸಲಿದ್ದಾರೆ ಎಂದು ಕೃಷ್ಣಮೂರ್ತಿ ಆಚಾರ್ಯ ಹೇಳಿದ್ದಾರೆ.
ಡಿ.ಕೆ. ಶಿವಕುಮಾರ್ ಅವರು ಕರಾವಳಿ ಜಿಲ್ಲೆಗಳಿಗೆ ಭೇಟಿ ನೀಡಿದಾಗಲೆಲ್ಲಾ ಇಲ್ಲಿನ ಯುವಜನತೆಗೆ ಇಲ್ಲಿಯೇ ಉದ್ಯೋಗ ನೀಡುವುದಕ್ಕಾಗಿ ಬೃಹತ್ ಉದ್ಯಮಗಳನ್ನು ಸ್ಥಾಪಿಸುವ ಬಗ್ಗೆ ಪ್ರಸ್ತಾಪಿಸಿದ್ದಾರೆ, ಅದಕ್ಕೀಗ ಕಾಲ ಕೂಡಿ ಬಂದಿದೆ ಎಂದವರು ಭರವಸೆ ವ್ಯಕ್ತಪಡಿಸಿದ್ದಾರೆ.
