ನ.5ರಂದು ಬೆಂಗಳೂರಿನಲ್ಲಿ ಎಸ್ಐಆರ್ ವಿರುದ್ಧ ಇಂಡಿಯಾ ಒಕ್ಕೂಟದ ಬೃಹತ್ ಪ್ರತಿಭಟನೆ : ಬಿ.ಕೆ. ಹರಿಪ್ರಸಾದ್ – vishwanews24

Featured, ರಾಜ್ಯ ನ್ಯೂಸ್

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ..

ಜಿಲ್ಲಾ, ತಾಲ್ಲೂಕು ಮಟ್ಟದಲ್ಲೂ ಹೋರಾಟ ನಡೆಸಲು ನಿರ್ಧಾರ

ಬೆಂಗಳೂರು: ಎಸ್ಐಆರ್ ಪ್ರಕ್ರಿಯೆ ಹಾಗೂ ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರ ವಿರುದ್ಧ ನ.5ರಂದು ಬೆಂಗಳೂರು ನಗರದ ಫ್ರೀಡಂ ಪಾರ್ಕ್‌ನಲ್ಲಿ ಇಂಡಿಯಾ ಒಕ್ಕೂಟದ ವತಿಯಿಂದ ಬೃಹತ್ ಸಭೆ ಏರ್ಪಡಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಇಂಡಿಯಾ ಒಕ್ಕೂಟದ ಮೈತ್ರಿ ಪಕ್ಷಗಳ ನಾಯಕರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ಐಆರ್ ಹಾಗೂ ಜ್ಞಾನೇಶ್ ಕುಮಾರ್ ಅವರ ವಿರುದ್ಧ ನ.1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂಡಿಯಾ ಒಕ್ಕೂಟ ವತಿಯಿಂದ ನಡೆದ ಪ್ರತಿಭಟನೆಯ ಮುಂದುವರಿದ ಭಾಗವಾಗಿ ಈ ಬೃಹತ್ ಸಭೆ ಹಮ್ಮಿಕೊಳ್ಳಲಾಗಿದೆ ಎಂದರು.

ದೇಶದಾದ್ಯಂತ ತಾಲ್ಲೂಕು ಹಾಗೂ ಬ್ಲಾಕ್ ಮಟ್ಟದಲ್ಲಿ ಪ್ರತಿಭಟನೆ ನಡೆಸಬೇಕು ಎಂದು ಇಂಡಿಯಾ ಒಕ್ಕೂಟದ ನಾಯಕರು ದೆಹಲಿಯಲ್ಲಿ ತೀರ್ಮಾನಿಸಿದ್ದಾರೆ. ಕರ್ನಾಟಕದಲ್ಲಿ ಮೊದಲು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿ, ನಂತರ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಪ್ರತಿಭಟನೆ ನಡೆಸಲು ಮೈತ್ರಿಕೂಟದ ನಾಯಕರು ತೀರ್ಮಾನಿಸಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ :

ಬೆಂಗಳೂರು: ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಸರ್ಕಾರ; ನಂದಿನಿ ಮೊಸರಿನ ದರ ಇಳಿಕೆಗೆ ಸಿಎಂ. ಸೂಚನೆ – vishwanews24

ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡಲು ಬಿಜೆಪಿ ಹಾಗೂ ಆರೆಸ್ಸೆಸ್ ಪ್ರಯತ್ನಿಸುತ್ತಿವೆ. ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ ಈ ಹೋರಾಟ ಮುಂದುವರಿಯಲಿದೆ. ರಾಜ್ಯಮಟ್ಟದಲ್ಲಿ ಹೋರಾಟ ಮಾಡಿದ ಬಳಿಕ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

ಸಿಪಿಎಂ ಪಕ್ಷದ ಕಾರ್ಯದರ್ಶಿ ಕೆ. ಪ್ರಕಾಶ್ ಮಾತನಾಡಿ, ಎಸ್ಐಆರ್ ರದ್ದಾಗಬೇಕು, ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು, ಮುಖ್ಯ ಚುನಾವಣಾ ಆಯುಕ್ತರ ನೇಮಕ ಪ್ರಕ್ರಿಯೆಯನ್ನು ಪ್ರಜಾಸತ್ತಾತ್ಮಕಗೊಳಿಸಬೇಕು. ಸುಪ್ರೀಂ ಕೋರ್ಟ್ ಸೂಚನೆಯ ಅನುಸಾರ ಆಯ್ಕೆ ಪ್ರಕ್ರಿಯೆ ನಡೆಸಬೇಕು. ಮುಖ್ಯ ಚುನಾವಣಾ ಆಯುಕ್ತರಿಗೆ ಶಾಶ್ವತ ವಿನಾಯಿತಿ ನೀಡಿರುವ ಕಾಯ್ದೆಯನ್ನು ಹಿಂಪಡೆಯಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆಗಳಾಗಿವೆ. ಈ ಬೇಡಿಕೆಗಳನ್ನು ಆಗ್ರಹಿಸಿ ನ.5ರಂದು ಹೋರಾಟ ನಡೆಸುತ್ತಿದ್ದೇವೆ ಎಂದರು.

ಇದನ್ನೂ ಓದಿ :

ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ಬಿಲ್ಲವ ಯುವ ವೇದಿಕೆಯಿಂದ ಎಸ್ಪಿ – ಉಸ್ತುವಾರಿ ಸಚಿವರಿಗೆ ಮನವಿ – vishwanews24

ನಂತರದ ದಿನಗಳಲ್ಲಿ ರಾಜ್ಯದಲ್ಲಿ ಈ ಹೋರಾಟವನ್ನು ವಿಕೇಂದ್ರೀಕರಣಗೊಳಿಸಬೇಕು. ಪ್ರಜಾಪ್ರಭುತ್ವ ವ್ಯವಸ್ಥೆ ಕಾಪಾಡುವ ಹೊಣೆಗಾರಿಕೆ ನಮ್ಮ ಮೇಲಿದ್ದು, ಇಂಡಿಯಾ ಒಕ್ಕೂಟ ಇದನ್ನು ವಿಸ್ತಾರವಾಗಿ ತೆಗೆದುಕೊಂಡು ಹೋಗಲು ತೀರ್ಮಾನಿಸಿದೆ. ಈ ಪ್ರತಿಭಟನೆಯಲ್ಲಿ ಎಲ್ಲಾ ಪಕ್ಷಗಳು ಭಾಗವಹಿಸಲಿವೆ ಎಂದು ತಿಳಿಸಿದರು.

ಭಾರತವನ್ನು ಸರ್ವಾಧಿಕಾರಿ ನೆಲೆಗಟ್ಟಿಗೆ ಪರಿವರ್ತಿಸುವ ಹಾಗೂ ಕೋಮುವಾದಿ ಹಿಂದುತ್ವ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗಿರುವ ಬಿಜೆಪಿ ಪ್ರಯತ್ನಕ್ಕೆ ಈ ದೇಶದಲ್ಲಿ ಅವಕಾಶವಿಲ್ಲ ಎಂಬ ಸಂದೇಶ ನೀಡಲು ನಾವು ಮುಂದಾಗಿದ್ದೇವೆ ಎಂದು ಹೇಳಿದರು.

ಮಾಧ್ಯಮಗೋಷ್ಠಿಯಲ್ಲಿ ಸಿಪಿಐನ ಸಾಥಿ ಸುಂದರೇಶ್, ಸಿಪಿಎಂನ ಮಹಾಂತೇಶ್, ಫಾರ್ವರ್ಡ್ ಬ್ಲಾಕ್‌ನ ಶಿವಶಂಕರ್, ಅಲಿ, ಸಿಪಿಐಎಂಎಲ್ ಪಕ್ಷದ ಕ್ಲಿಫ್ಟನ್ ಡಿ ರೊಜಾರಿಯೋ ಹಾಗೂ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಉಪಸ್ಥಿತರಿದ್ದರು.

ಇದನ್ನೂ ಓದಿ :

ಮುರಸು ಚಂಡಮಾರುತದ ಪ್ರಭಾವ  : ರಾಜ್ಯದಲ್ಲಿ ಮುಂದಿನ 3 ದಿನ ವ್ಯಾಪಕ ಮಳೆಯ ಎಚ್ಚರಿಕೆ – vishwanews24

Leave a Reply