ಪೌರತ್ವ ತಿದ್ದುಪಡಿ ಕಾಯಿದೆ ವಿರುದ್ಧ ಮಂಗಳೂರಿನಲ್ಲಿ ತೀವ್ರಗೊಂಡಿದ ಪ್ರತಿಭಟನೆ : ಲಘು ಲಾಠಿ ಪ್ರಹಾರ , ಹಲವರ ವಶ -Vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ಪೌರತ್ವ ತಿದ್ದುಪಡಿ ಕಾಯಿದೆ ವಿರುದ್ಧ ಪ್ರತಿಭಟನೆ ಮಂಗಳೂರಿನಲ್ಲಿ ತೀವ್ರಗೊಂಡಿದೆ. ಸದ್ಯ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಪೊಲೀಸರ ಮೇಲೆಯೇ ಪ್ರತಿಭಟನಾಕಾರರು ಮನಸೋಇಚ್ಛೆ ಕಲ್ಲುತೂರಾಟ ನಡೆಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಆಶ್ರುವಾಯು ಪ್ರಯೋಗಿಸಿದ್ದಾರೆ.

ಸ್ಟೇಟ್ ಬ್ಯಾಂಕ್ ಬಳಿ ಆರಂಭವಾದ ಪ್ರತಿಭಟನೆ ವೇಳೆ ಹಿಂಸಾಚಾರ ಉಂಟಾಗಿದ್ದು, ಹೋರಾಟಗಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ, ಕೆಲ ಪೊಲೀಸರು ಗಾಯಗೊಂಡಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿ, ಗಾಳಿಯಲ್ಲಿ ಗುಂಡು ಹಾರಿಸಿದರು. ಆದರೆ ಇದಕ್ಕೂ ಪ್ರತಿಭಟನಾಕಾರರು ಜಗ್ಗದೇ ಪೊಲೀಸರೊಂದಿಗೆ ಸಂಘರ್ಷಕ್ಕಿಳಿದಿದ್ದಾರೆ.

ಇನ್ನು ರಾವ್ ಅಂಡ್ ರಾವ್ ಸರ್ಕಲ್ ನಲ್ಲಿ ಪೊಲೀಸರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಬಳಿ ಬಿಗಿ ಬಂದೋಬಸ್ತ್ ಒದಗಿಸಿದ್ದು, ವಾಹನ ಸಂಚಾರ ನಿಷೇಧಿಸಲಾಗಿದೆ. ಪ್ರತಿಭಟನಾಕಾರರ ಮೇಲೆ ಅಶ್ರುವಾಯು ಪ್ರಯೋಗಿಸಲಾಗಿದ್ದು, ಸದ್ಯ ರಾವ್ ಅಂಡ್ ರಾವ್ ಸರ್ಕಲ್ ನಲ್ಲಿ ಪರಿಸ್ಥಿತಿ ತಾರಕಕ್ಕೇರಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ಕೆಲ ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ…

ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಈ ನಡುವೆ ಎಸ್ಕೆಎಸ್ಸೆಸ್ಸೆಫ್ ಸಂಘಟನೆಯು ಪ್ರತಿಭಟನೆ ನಡೆಸುವ ಸುಳಿವು ಪೊಲೀಸರಿಗೆ ದೊರಕಿತ್ತು. ಈ ಹಿನ್ನಲೆಯಲ್ಲಿ  ಪೊಲೀಸರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬಂದೋಬಸ್ತ್ ಕಲ್ಪಿಸಿದ್ದರು. ಆದರೆ ಈ ವೇಳೆಗೆ ಸ್ಟೇಟ್ ಬ್ಯಾಂಕ್ ಬಳಿಯ ಸಿಟಿ ಬಸ್ ನಿಲ್ದಾಣದ ಸಮೀಪ ಗುಂಪು ಜಮಾಯಿಸಿ ಘೋಷಣೆ ಕೂಗತೊಡಗಿದರು. ಈ ವೇಳೆ ಪೊಲೀಸರು ಲಘು ಲಾಠಿಚಾರ್ಜ್ ಮಾಡಿ ಗುಂಪನ್ನು ಚದುರಿಸಿ ಹಲವರನ್ನು ಪೊಲೀಸ್ ವಶಕ್ಕೆ ಪಡೆದಿದ್ದಾರೆ.