ಬಿಜೆಪಿಯವರಿಗಿಂತ ಮುಂಚೆಯೇ ನಾವು ಭಗವದ್ಗೀತೆಯಲ್ಲಿನ ಉತ್ತಮ ಅಂಶಗಳನ್ನು ಪಠ್ಯಪುಸ್ತಕದಲ್ಲಿ ಸೇರಿಸಿದ್ದೇವೆ : ಡಿ.ಕೆ. ಶಿವಕುಮಾರ್ – VIshwanews24
ಭ್ರಷ್ಟಾಚಾರದಲ್ಲಿ ನಂಬರ್ ಒನ್ ಆಗಿರುವ ರಾಜ್ಯ ಸರ್ಕಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬಹುಮಾನ ನೀಡಬೇಕು :
ಯಾರು ಏನೇ ಹೇಳಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ ನಮಗೆ ವಿಶ್ವಾಸವಿದೆ..
ಕಲಬುರಗಿ: ರಾಜ್ಯ ಬಿಜೆಪಿ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಭ್ರಷ್ಟಾಚಾರದ ಕುರಿತು ಪ್ರಜಾವಾಣಿ ಸರಣಿ ವರದಿಗಳನ್ನು ಪ್ರಕಟಿಸುತ್ತಿದ್ದು, ಭ್ರಷ್ಟಾಚಾರದಲ್ಲಿ ನಂಬರ್ ಒನ್ ಆಗಿರುವ ರಾಜ್ಯ ಸರ್ಕಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬಹುಮಾನ ನೀಡಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕುಟುಕಿದರು.
ನಗರದಲ್ಲಿ ಪಕ್ಷದ ಡಿಜಿಟಲ್ ಸದಸ್ಯತ್ವ ಅಭಿಯಾನದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಬಂದಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡ ರೈತರ ಹೊಲಗಳಿಗೆ ಬೋರ್ ವೆಲ್ ಕೊರೆಸುವ ಗಂಗಾ ಕಲ್ಯಾಣ ಯೋಜನೆಯಲ್ಲಿಯೂ ಭಾರಿ ಭ್ರಷ್ಟಾಚಾರ ನಡೆದಿದ್ದು, ಪಕ್ಷವು ರಾಜ್ಯ ಸರ್ಕಾರದ ಭ್ರಷ್ಟಾಚಾರದ ದಾಖಲೆಗಳನ್ನು ಶೀಘ್ರ ಬಿಡುಗಡೆ ಮಾಡಲಿದೆ ಎಂದರು.

ಭಗವದ್ಗೀತೆ ಅಳವಡಿಸಿದ್ದೇ ನಾವು: ರಾಜ್ಯ ಸರ್ಕಾರ ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಅಳವಡಿಸುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ಬಿಜೆಪಿಯವರಿಗಿಂತ ಮುಂಚೆಯೇ ನಾವು ಭಗವದ್ಗೀತೆಯಲ್ಲಿನ ಉತ್ತಮ ಅಂಶಗಳನ್ನು ಪಠ್ಯಪುಸ್ತಕದಲ್ಲಿ ಸೇರಿಸಿದ್ದೇವೆ. ರಾಜೀವ್ ಗಾಂಧಿ ಅವರು ಪ್ರಧಾನಿ ಆಗಿದ್ದಾಗ ದೂರದರ್ಶನದಲ್ಲಿ ರಾಮಾಯಣ ಧಾರಾವಾಹಿ ಪ್ರಸಾರ ಆರಂಭಿಸಿದರು. ಮುಖ್ಯಮಂತ್ರಿಯಾಗಿದ್ದ ಕೆಂಗಲ್ ಹನುಮಂತಯ್ಯ ಅವರು ₹ 2ಕ್ಕೆ ಒಂದರಂತೆ ಭಗವದ್ಗೀತೆಯ ಪ್ರತಿಗಳನ್ನು ಹಂಚಿದರು ಎಂದು ಹೇಳುತ್ತಾ ಭಗವದ್ಗೀತೆಯಲ್ಲಿ ಯದಾ ಯದಾಹಿ ಧರ್ಮಸ್ಯ.. ಶ್ಲೋಕವನ್ನು ಹೇಳಿದರು.
ಯಾರು ಏನೇ ಹೇಳಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ ನಮಗೆ ವಿಶ್ವಾಸವಿದೆ ಎಂದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ, ವಿಧಾನಪರಿಷತ್ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ ಇದ್ದರು.
