ಭಾರಿ ಮಳೆ: ಉಡುಪಿ, ಮಂಗಳೂರಿನಲ್ಲಿ ಶಾಲಾ ಕಾಲೇಜುಗಳಿಗೆ ಇಂದು, ನಾಳೆ ರಜೆ ಘೋಷಣೆ
ಉಡುಪಿ: ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡ ಪರಿಣಾಮ ಉಡುಪಿ ಮತ್ತು ಮಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಈ ಎರಡು ಜಿಲ್ಲೆಗಳಲ್ಲಿ ಶುಕ್ರವಾರ ಮತ್ತು ಶನಿವಾರ ಎರಡು ದಿನಗಳ ಕಾಲ ಶಾಲಾ ಕಾಲೇಜುಗಶಳಿಗೆ ರಜೆ ಘೋಷಣೆ ಮಾಡಲಾಗಿದೆ.
ಉಡುಪಿ ಮತ್ತು ಮಂಗಳೂರಿನಲ್ಲಿ ಕಳೆದ 3 ಗಂಟೆಗಳಿಂದ ಸತತ ಧಾರಾಕಾರ ಮಳೆಯಾಗುತ್ತಿದ್ದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಮುನ್ನೆಚ್ಚರಿಕಾ ಕ್ರಮವಾಗಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಮಂಗಳೂರಿನಲ್ಲಿಯೂ ಇಂದು, ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಪ್ರಮುಖವಾಗಿ ಉಡುಪಿ, ಕುಂದಾಪುರ, ಕಾರ್ಕಳ, ಬೈಂದೂರು, ಕಾಪುವಿನಲ್ಲಿ ಬಿರುಸಿನ ಮಳೆಯಾದ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದ್ದು, ನಾಡದೋಣಿ ಮೀನುಗಾರರಿಗೆ ಜಿಲ್ಲಾಡಳಿತ ಈಗಾಗಲೇ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಸಂದೇಶ ರವಾನಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಭಾರೀ ಮಳೆ ಮಳೆಯಾಗುತ್ತಿದ್ದು, ಸುಳ್ಯ, ಪುತ್ತೂರು, ಬೆಳ್ತಂಗಡಿ ತಾಲೂಕಿನಲ್ಲಿ ನಿನ್ನೆ ಸಂಜೆಯಿಂದ ನಿರಂತರ ಮಳೆ ಸುರಿಯುತ್ತಿದೆ. ಮಳೆಯಿಂದ ನದಿಗಳು ತುಂಬಿ ಹರಿಯುತ್ತಿವೆ.
ಇದಲ್ಲದೆ ಚಿಕ್ಕಮಗಳೂರು ನಗರ ಸೇರಿದಂತೆ ಮಲೆನಾಡು ಭಾಗ, ಹಾಸನ, ವಿಜಯಪುರ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಮೂಡಿಗೆರೆ ತಾಲೂಕುಗಳಲ್ಲೂ ಭಾರಿ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
