ಮುಂದಿನ ವರ್ಷದಿಂದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿಇಂಗ್ಲಿಷ್ ಕಲಿಕೆ: ಸಿಎಂ. ಕುಮಾರಸ್ವಾಮಿ

Featured, ಜಿಲ್ಲೆ

ಬೆಳಗಾವಿ: ರಾಜ್ಯದ ಒಂದು ಸಾವಿರ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2019–20ನೇ ಶೈಕ್ಷಣಿಕ ವರ್ಷದಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿ ತಿಳಿಸಿದರು.

ಬಿಜೆಪಿಯ ಉಮಾನಾಥ ಕೋಟ್ಯಾನ್‌ ಪ್ರಶ್ನೆಗೆ ಮಂಗಳವಾರ ಉತ್ತರಿಸಿದ ಅವರು, ‘ಈ ಸಲುವಾಗಿ ಶಿಕ್ಷಕರಿಗೆ ಇಂಗ್ಲಿಷ್‌ ಪ್ರಾದೇಶಿಕ ಸಂಸ್ಥೆಯಲ್ಲಿ ತರಬೇತಿ ನೀಡುವ ಪ್ರಕ್ರಿಯೆ ಆರಂಭವಾಗಿದೆ. ಈ ಸಂಸ್ಥೆಯಲ್ಲಿ ವಿಡಿಯೊ ಕೌನ್ಸೆಲಿಂಗ್‌ ಸೌಕರ್ಯವೂ ಇದೆ. ಪಠ್ಯಪುಸ್ತಕ, ಆಡಿಯೊ– ವಿಡಿಯೊ ಕಲಿಕಾ ಕಿಟ್‌ಗಳು ಹಾಗೂ ಇ–ಕಲಿಕಾ ಸಾಧನಗಳನ್ನು ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ನಿರ್ದೇಶನಾಲಯ ಸಿದ್ಧಪಡಿಸುತ್ತಿದೆ’ ಎಂದರು.

‘ಇಂಗ್ಲಿಷ್‌ ಮಾಧ್ಯಮದಲ್ಲಿ ಶಿಕ್ಷಣ ನೀಡುವ ಉದ್ದೇಶದಿಂದಲೇ 1715 ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಇನ್ನೂ 1 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ’ ಎಂದರು.