ಮುಂಬರುವ ಉಪ ಚುನಾವಣೆಗಳಲ್ಲಿ ಜೆಡಿಎಸ್ ಭದ್ರಕೋಟೆ ಮಂಡ್ಯದಲ್ಲಿ ಕಮಲ ಅರಳಿಸಲು ಬಿಜೆಪಿ ಸಿದ್ಧತೆ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಮುಂಬರುವ ಚುನಾವಣೆಗಳಲ್ಲಿ ಜೆಡಿಎಸ್ ಭದ್ರಕೋಟೆಯಾಗಿದ್ದ ಮಂಡ್ಯದಲ್ಲಿ ಕಮಲ ಅರಳಿಸಲು ಬಿಜೆಪಿ ಸಿದ್ಧತೆ ನಡೆಸಿದೆ.

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಬೆಂಬಲದೊಂದಿಗೆ ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದು ಬಂದಿರುವ ಸುಮಲತಾ ಅಂಬರೀಷ್ ಅವರನ್ನು ಸಮಾರಂಭಕ್ಕೆ ಆಹ್ವಾನಿಸಲು ಬಿಜೆಪಿ ನಿರ್ಧರಿಸಿದೆ.

ಜೆಡಿಎಸ್ ಅತೃಪ್ತ ಶಾಸಕರ ರಾಜೀನಾಮೆಯಿಂದ ತೆರವಾಗಿರುವ ಕೆ.ಆರ್ ಪೇಟೆಯಲ್ಲಿ ವಿಧಾನಸಭೆಗೆ ಉಪ ಚುನಾವಣೆ ನಡೆಯಲಿದೆ. ಈ ಉಪ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಅವರನ್ನೇ ಮತ್ತೆ ಕಣಕ್ಕಿಳಿಸಲು ಜೆಡಿಎಸ್ ಸಿದ್ಧತೆ ನಡೆಸಿದೆ. ದೇವೇಗೌಡರು ಈಗಾಗಲೇ ಈ ವಿಷಯವನ್ನು ಬಹಿರಂಗವಾಗಿ ಘೋಷಿಸಿದ್ದಾರೆ.

ಸುಮಲತಾ ಅವರ ಬೆಂಬಲವಿದ್ದರೆ ಕೆ.ಆರ್ ಪೇಟೆ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುವುದು ಕಷ್ಟವೇನಲ್ಲ. ಲೋಕಸಭಾ ಚುನಾವಣೆಯಲ್ಲಿ ಅವರಿಗೆ ಕೆ.ಆರ್ ಪೇಟೆ ಕ್ಷೇತ್ರದಲ್ಲಿ ಉತ್ತಮ ಲೀಡ್ ಬಂದಿತ್ತು.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ, ದೇವೇಗೌಡರ ಮೊಮ್ಮಗ, ಎಚ್‌.ಡಿ ಕುಮಾರಸ್ವಾಮಿ ಪುತ್ರ ನಿಖಿಲ್‌ ಅವರನ್ನು ಸೋಲಿಸಿ ಭಾರೀ ಬಹುಮತದಿಂದ ಗೆದ್ದಿರುವ ಸುಮಲತಾ ಇದೀಗ ನೂತನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಅಭಿನಂದನಾ ಸಮಾರಂಭದಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.