ಮೋದಿ ಸಾರ್ವಜನಿಕ ಜೀವನಕ್ಕೆ 25 ವರ್ಷ : ಡಿ.1ರಿಂದ ದೇಶಾದ್ಯಂತ ಬಿಜೆಪಿಯ ‘ಸೇವಾ ದೂತ’ ಅಭಿಯಾನ -vishwanews24

Featured, ರಾಷ್ಟ್ರ ನ್ಯೂಸ್

ಮೋದಿ ಸಾರ್ವಜನಿಕ ಜೀವನಕ್ಕೆ 25 ವರ್ಷ – ಡಿ.1ರಿಂದ ದೇಶಾದ್ಯಂತ ಬಿಜೆಪಿಯ ‘ಸೇವಾ ದೂತ’ ಅಭಿಯಾನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕ ಜೀವನದಲ್ಲಿ 25 ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ಡಿಸೆಂಬರ್ 1ರಿಂದ 25ರವರೆಗೆ ದೇಶಾದ್ಯಂತ `ಸೇವಾ ದೂತ’ ಅಭಿಯಾನ  ಹಮ್ಮಿಕೊಂಡಿದೆ.

25 ದಿನಗಳ ಈ ಅಭಿಯಾನದಡಿ ಬಿಜೆಪಿ ಹಿರಿಯ ನಾಯಕರು ಹಾಗೂ ಕಾರ್ಯಕರ್ತರು ದೇಶದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ವಾಸ್ತವ್ಯ ಹೂಡಿ ಜನರೊಂದಿಗೆ ನೇರ ಸಂಪರ್ಕ ಸಾಧಿಸಲಿದ್ದಾರೆ. ಕೇಂದ್ರ ಸರ್ಕಾರದ ವಿವಿಧ ಜನಪರ ಯೋಜನೆಗಳು ತಳಮಟ್ಟದಲ್ಲಿ ಅನುಷ್ಠಾನವಾಗುತ್ತಿರುವ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಅಲ್ಲದೇ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿ ಸಾರ್ವಜನಿಕರ ಅಭಿಪ್ರಾಯ ಹಾಗೂ ಸಮಸ್ಯೆಗಳನ್ನು ಆಲಿಸಲಿದ್ದಾರೆ.

ವಿಶೇಷವಾಗಿ ಉತ್ತರ ಪ್ರದೇಶ ಮತ್ತು ಪಂಜಾಬ್ ಸೇರಿದಂತೆ ಮುಂಬರುವ ವಿಧಾನಸಭಾ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಅಭಿಯಾನಕ್ಕೆ ಹೆಚ್ಚಿನ ಆದ್ಯತೆ ನೀಡಲು ಬಿಜೆಪಿ ನಿರ್ಧರಿಸಿದೆ. ಸ್ಥಳೀಯ ಜನರ ನಿರೀಕ್ಷೆಗಳನ್ನು ತಿಳಿದುಕೊಳ್ಳುವುದು, ಸರ್ಕಾರಿ ಯೋಜನೆಗಳ ಅನುಷ್ಠಾನದಲ್ಲಿನ ಲೋಪಗಳನ್ನು ಗುರುತಿಸುವುದು ಹಾಗೂ ಪಕ್ಷದ ಜನಸಂಪರ್ಕವನ್ನು ಬಲಪಡಿಸುವುದು ಅಭಿಯಾನದ ಉದ್ದೇಶವಾಗಿದೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹರೀಶ್ ದ್ವಿವೇದಿ ಅವರನ್ನು `ಸೇವಾ ದೂತ’ ಅಭಿಯಾನದ ಸಂಚಾಲಕರನ್ನಾಗಿ ನೇಮಿಸಲಾಗಿದ್ದು, ದೇಶಾದ್ಯಂತ ಅಭಿಯಾನದ ಅನುಷ್ಠಾನದ ಜವಾಬ್ದಾರಿ ವಹಿಸಲಾಗಿದೆ. ಡಿ.25ರಂದು ಸುಶಾಸನ ದಿನದಂದು ಅಭಿಯಾನ ಮುಕ್ತಾಯಗೊಳ್ಳಲಿದೆ.

Leave a Reply