ರಾಜ್ಯ ಮತ್ತು ಇಲ್ಲಿನ ಜನ ಉಳಿಯಬೇಕು ಎಂಬ ಕಾರಣಕ್ಕೆ ನಾವು ಗೆಲ್ಲಬೇಕಾಗಿದೆ : ಸಿದ್ದರಾಮಯ್ಯ – Vishwanews24
ಬಿಜೆಪಿಯವರು ವಾಮ ಮಾರ್ಗದಿಂದ ಅಧಿಕಾರಕ್ಕೆ ಬಂದು ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿದ್ದಾರೆ..
ಬೆಂಗಳೂರು: 2023ರ ಏಪ್ರಿಲ್- ಮೇಗೆ ವಿಧಾನಸಭಾ ಚುನಾವಣೆ ಬರುತ್ತದೆ, ಈ ಚುನಾವಣೆಯನ್ನು ನಾವು ಗೆಲ್ಲಲೇಬೇಕು. ಇದು ನಮ್ಮ ಮುಂದಿರುವ ಸವಾಲು. ನಾವು ಅಧಿಕಾರಕ್ಕೆ ಬರಬೇಕು ಎನ್ನುವ ಕಾರಣಕ್ಕೆ ಚುನಾವಣೆ ಗೆಲ್ಲುವುದಲ್ಲ, ರಾಜ್ಯ ಮತ್ತು ಇಲ್ಲಿನ ಜನ ಉಳಿಯಬೇಕು ಎಂಬ ಕಾರಣಕ್ಕೆ ನಾವು ಗೆಲ್ಲಬೇಕಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕರೆ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷದ ಚಿಂತನಾ ಶಿಬಿರದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ವಾಮ ಮಾರ್ಗದಿಂದ ಅಧಿಕಾರಕ್ಕೆ ಬಂದು ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿದ್ದಾರೆ. ನಮ್ಮ ಪಕ್ಷ 6 ಕಮಿಟಿಗಳನ್ನು ಮಾಡಿದೆ, ಇವುಗಳು ಸುದೀರ್ಘ ಚರ್ಚೆ ನಡೆಸಿ ತನ್ನ ನಿರ್ಣಯಗಳನ್ನು ಮಾಡಿ, ಪಕ್ಷದ ನಿಲುವನ್ನು ಸ್ಪಷ್ಟಪಡಿಸಬೇಕಾಗುತ್ತದೆ. 2024ಕ್ಕೆ ಲೋಕಸಭಾ ಚುನಾವಣೆ ಇದೆ, ಕರ್ನಾಟಕದಲ್ಲಿ 2023ರಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣೆ ನಡಯಲಿದೆ. ಇವುಗಳ ಜೊತೆಗೆ ಜಿಲ್ಲಾ ಮತ್ತು ತಾಲೂಕು ಪಂಚಾಯತ್ಗಳಿಗೆ, ಮಹಾನಗರ ಪಾಲಿಕೆ ಚುನಾವಣೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ನವ ಸಂಕಲ್ಪ ಚಿಂತನಾ ಶಿಬಿರ ಆಯೋಜಿಸಲಾಗಿದೆ. ಪಕ್ಷ ಬೂತ್ ಮಟ್ಟದಿಂದ ಕೆಪಿಸಿಸಿ ಮಟ್ಟದ ವರೆಗೆ ಸಂಘಟಿತಗೊಂಡರೆ ಚುನಾವಣೆಗಳ ಗೆಲುವು ಕಷ್ಟದ ಕೆಲಸವಲ್ಲ. ಇಂತಹ ಹಲವು ಚುನಾವಣೆಗಳನ್ನು ಯಶಸ್ವಿಯಾಗಿ ಪಕ್ಷ ಈಗಾಗಲೇ ಎದುರಿಸಿದೆ ಎಂದರು.
ಅಮಾಯಕರನ್ನು ಬಂಧಿಸಿದ ಪೊಲೀಸರ ವಿರುದ್ಧ SDPI ಕಾನೂನಾತ್ಮಕ ಹೋರಾಟ ನಡೆಸಲಿದೆ : ಅನ್ವರ್ ಸಾದಾತ್ – Vishwanews24
ಪಕ್ಷವನ್ನು ಬಲಪಡಿಸಲು ಅನೇಕ ಕ್ರಮಗಳನ್ನು ಎಐಸಿಸಿ ಹಾಗೂ ಕೆಪಿಸಿಸಿ ತೆಗೆದುಕೊಳ್ಳಲು ಆರಂಭ ಮಾಡಿದೆ. ಅದರ ಭಾಗವಾಗಿ ಈ ಸಭೆಯೂ ನಡೆಯುತ್ತಿದೆ. ತಾಲೂಕು ಹಾಗೂ ಜಿಲ್ಲಾ ಪಂಚಾಯತ್ಗಳಿಗೆ ಚುನಾವಣೆ ನಡೆಸಬೇಕು ಎಂಬ ಆದೇಶವಾಗಿದೆ. ಸುಪ್ರೀಂ ಕೋರ್ಟ್ ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶ ಸರ್ಕಾರದ ಮೀಸಲಾತಿ ಬಗ್ಗೆ ಒಂದು ತೀರ್ಪನ್ನು ನೀಡಿದೆ. ತೀರ್ಪಿನ ಪ್ರಕಾರ ಹಿಂದುಳಿದ ಜಾತಿಗಳಿಗೆ ಮೀಸಲಾತಿ ನೀಡುವಾಗ ಒಂದು ನಂಬಿಕಾರ್ಹ ಮಾಹಿತಿ ಇರಬೇಕು ಮತ್ತು ಮೀಸಲಾತಿ ಪ್ರಮಾಣ 50% ಮೀರಬಾರದು ಎಂದು ಹೇಳಿದೆ. ಇದು 2021 ಏಪ್ರಿಲ್ನಲ್ಲಿ ನೀಡಿದ ತೀರ್ಪಾಗಿದೆ. ಆದರೆ ರಾಜ್ಯ ಬಿಜೆಪಿ ಸರ್ಕಾರ ಈ ತೀರ್ಪು ಬಂದ ಮೇಲೆ ಯಾವ ಕ್ರಮ ಕೈಗೊಂಡಿಲ್ಲ, ಇತ್ತೀಚೆಗೆ ಭಕ್ತವತ್ಸಲಂ ಅವರ ಸಮಿತಿ ರಚನೆ ಮಾಡಿದೆ, ಆ ಸಮಿತಿ ಇನ್ನು ವರದಿ ನೀಡಿಲ್ಲ. ಹತ್ತು ವಾರದಲ್ಲಿ ಚುನಾವಣೆ ನಡೆಸಬೇಕು ಎಂದು ಕೋರ್ಟ್ ಹೇಳಿದೆ. ನಮ್ಮ ಪಕ್ಷವು ಸರ್ವ ಪಕ್ಷ ಸಭೆಯಲ್ಲಿ ಬಹಳ ಸ್ಪಷ್ಟವಾಗಿ ಹಿಂದುಳಿದ ಜಾತಿಗಳಿಗೆ ಮೀಸಲಾತಿ ಇಲ್ಲದೆ ಚುನಾವಣೆ ನಡೆಸಬಾರದು ಎಂದು ಹೇಳಿದೆ. ಹಿಂದುಳಿದ ಜಾತಿಗಳಿಗೆ, ಮಹಿಳೆಯರಿಗೆ ಮೀಸಲಾತಿ ನೀಡಿದ್ದು ರಾಜೀವ್ ಗಾಂಧಿ ಅವರು ಸಂವಿಧಾನಕ್ಕೆ 73 ಹಾಗೂ 74ನೇ ತಿದ್ದುಪಡಿ ಮಾಡಿದ ನಂತರ. ಮಹಿಳೆಯರಿಗೆ 50%, ಹಿಂದುಳಿದ ಜಾತಿಗಳಿಗೆ 33% ಮೀಸಲಾತಿ ನೀಡಿದ್ದು. ಇದರಲ್ಲಿ ಅಲ್ಪಸಂಖ್ಯಾತರು ಹಾಗೂ ಇನ್ನಿತರೆ ಜಾತಿಗಳು ಸೇರುತ್ತವೆ. ಕಾಂಗ್ರೆಸ್ ಪಕ್ಷ ರಾಜಕೀಯ ಮೀಸಲಾತಿ ನೀಡಿದ್ದು ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ನುಡಿದರು.
