ಅವಶ್ಯಕತೆ ಬಿದ್ದರೆ ಮುಸ್ಲಿಮರು ಬಿಜೆಪಿಗೆ ಬೆಂಬಲ ; ಗುಂಡೂರಾವ್‌ ಹಾಗೂ ಸಿದ್ದರಾಮಯ್ಯ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಶಾಸಕ ರೋಷನ್ ಬೇಗ್ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಚುನಾವಣೋತ್ತರ ಸಮೀಕ್ಷೆಯಂತೆ ಫಲಿತಾಂಶ ಬಂದರೆ ಅದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರೇ ಕಾರಣ ಎಂದು ಶಿವಾಜಿನಗರ ಕಾಂಗ್ರೆಸ್ ಶಾಸಕ ರೋಷನ್ ಬೇಗ್ ಬಹಿರಂಗವಾಗಿಯೇ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಶಾಸಕಾಂಗ ಸಭೆಯ ನಾಯಕ ಸಿದ್ದರಾಮಯ್ಯ ಹಾಗೂ ನಮ್ಮ ಅಧ್ಯಕ್ಷ ದಿನೇಶ್ ಗುಂಡೂರಾವ್ ಪ್ಲಾಪ್ ಶೋ ದಿನೇಶ್ ಗುಂಡೂರಾವ್ ಅವರು ಸೇರಿ ಈ ಗತಿಗೆ ತಂದಿದ್ದಾರಲ್ಲ. ಎಕ್ಸಿಟ್ ಪೋಲ್ ನೋಡಿದರೆ ನನಗೆ ಬೇಸರವಾಗುತ್ತದೆ ಎಂದು ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದಾರೆ.

ಕಾಂಗ್ರೆಸ್ ಅಲ್ಪಸಂಖ್ಯಾತರ ಪರ ಕೆಲಸ ಮಾಡುತ್ತಿಲ್ಲ. ಕ್ರಿಶ್ಚಿಯನ್ನರಿಗೆ ಟಿಕೆಟ್ ಕೊಟ್ಟಿಲ್ಲ ಅದಕ್ಕೆ ಬೇರೆ ಕಾರಣ ಇದೆ. ನಮ್ಮ ಅಧ್ಯಕ್ಷರ ವಿರುದ್ಧ ನನಗೆ ಬೇಜಾರಿದೆ. ಇವತ್ತಿನ ರಾಜ್ಯ ಕಾಂಗ್ರೆಸ್ಸಿಗೆ ಈ ದುಸ್ಥಿತಿ ಬರಲು ದಿನೇಶ್ ಗುಂಡೂರಾವ್ ಮತ್ತು ಸಿದ್ದರಾಮಯ್ಯ ಅವರೇ ಕಾರಣ ಎಂದು ನೇರವಾಗಿ ವಾಗ್ದಾಳಿ ನಡೆಸಿದರು.

ಕರ್ನಾಟಕದಲ್ಲಿ ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ ಕಾಂಗ್ರೆಸ್‌ಗೆ ಹಿನ್ನಡೆಯಾಗುವ ಲಕ್ಷಣಗಳು ಕಂಡುಬಂದ ಹಿನ್ನಲೆಯಲ್ಲಿ ಬೇಗ್ ಅವರು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ರೋಷನ್‌ ಬೇಗ್‌ ಕಿಡಿಕಾರಿದ್ದಾರೆ. ಜತೆಗೆ ಅಂತಹ ಸಂದರ್ಭ ಸೃಷ್ಟಿಯಾದರೆ ಮುಸಲ್ಮಾನರು ಎನ್‌ಡಿಎಗೆ ಬೆಂಬಲಿಸುವ ನಿಲುವನ್ನೂ ತೆಗೆದುಕೊಳ್ಳಬೇಕಾಗುತ್ತದೆ ಎಂದು ಹೇಳಿ ಕಾಂಗ್ರೆಸ್ ನಾಯಕರಿಗೆ ಬಿಸಿ ಮುಟ್ಟಿಸಿದ್ದಾರೆ.

”ಸ್ವಾಭಿಮಾನದ ರಕ್ಷಣೆಯಾದರೆ ಮುಸ್ಲಿಮರು ಬೆಂಬಲಿಸುತ್ತಾರೆ. ಅವರನ್ನು ಊಳಿಗದ ಆಳುಗಳಂತೆ ನೋಡಿಕೊಂಡರೆ ಪರ್ಯಾಯ ಮಾರ್ಗದ ಬಗ್ಗೆಯೂ ಯೋಚಿಸಬೇಕಾಗುತ್ತದೆ. ಕೇಂದ್ರದಲ್ಲಿ ಮತ್ತೆ ಎನ್‌ಡಿಎ ಸರಕಾರ ರಚನೆಯಾಗಲಿದೆ. ಈ ಸಂದರ್ಭದಲ್ಲಿ ಮುಸ್ಲಿಮರೂ ತಮ್ಮ ಭವಿಷ್ಯದ ಬಗ್ಗೆ ಯೋಚಿಸಬೇಕಾಗುತ್ತದೆ. ಅಗತ್ಯ ಕಂಡರೆ ಎನ್‌ಡಿಎಗೆ ಬೆಂಬಲಿಸುವ ಬಗ್ಗೆಯೂ ಪರಿಶೀಲಿಸಬೇಕಾಗುತ್ತದೆ,” ಎನ್ನುವ ಮೂಲಕ ಕಾಂಗ್ರೆಸ್‌ ನಾಯಕರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.