ಉಡುಪಿ : 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ -vishwanews24
ಉಡುಪಿ : 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
ಉಡುಪಿ : ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ 1986 ರನ್ವಯ ರಾಜ್ಯ ಸರಕಾರದ ಅಧಿಸೂಚನೆಯಂತೆ ಉಡುಪಿ ಜಿಲ್ಲೆಯೂ ಸೇರಿದಂತೆ ಕರ್ನಾಟಕ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್ಬೋರ್ಡ್ ಅಥವಾ ಔಟ್ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು 2026 ರ ಜೂನ್ 1 ನೇ ತಾರೀಕಿನಿಂದ ಜುಲೈ 31 ನೇ ತಾರೀಕಿನವರೆಗೆ (ಉಭಯ ದಿನಗಳು ಸೇರಿದಂತೆ) ಅಂದರೆ ಒಟ್ಟು 61 ದಿನಗಳ ನಿಷೇಧ ಹೇರಿ ಜಿಲ್ಲಾಧಿಕಾರಿಗಳು ಆದೇಶಿಸಿರುತ್ತಾರೆ. ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿಸಿದೆ ಹಾಗೂ ಹವಾಮಾನದ ವೈಪರೀತ್ಯದ ಮುನ್ಸೂಚನೆ ನೀಡಿದಾಗ ಕಡ್ಡಾಯವಾಗಿ ಪಾಲಿಸಬೇಕು.
ಮೀನುಗಾರಿಕೆ ನಿಷೇಧವಿರುವುದರಿಂದ ಕಡ್ಡಾಯವಾಗಿ ಎಲ್ಲಾ ದೋಣಿಗಳು ಮೇ 31 ರ ಒಳಗೆ ಬಂದರು ಪ್ರವೇಶ ಮಾಡಬೇಕು. ತದನಂತರ ಬಂದರು ಪ್ರವೇಶ ಮಾಡಿದ ದೋಣಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಮೀನುಗಾರಿಕೆ ನಿಷೇಧಿಸಿದ ಸರಕಾರಿ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ 1986 ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ, ಒಂದು ವರ್ಷದ ಅವಧಿಗೆ ರಾಜ್ಯ ಮಾರಾಟಕರ ರಹಿತ ಡೀಸಿಲ್ ಪಡೆಯಲು ಅನರ್ಹರಾಗುತ್ತಾರೆ. ಈ ಆದೇಶವನ್ನು ಜಿಲ್ಲೆಯ ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರು ಪಾಲಿಸಿ, ಸರಕಾರದೊಂದಿಗೆ ಸಹಕರಿಸುವಂತೆ ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
