ಉಡುಪಿ:ಎಲ್ಲಾ ಇಲಾಖೆಗಳು ನಿಗಧಿತ ಅವಧಿಯೊಳಗೆ ಸಾರ್ವಜನಿಕರಿಗೆ ಸೇವೆ ಒದಗಿಸಬೇಕು :ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸಕಾಲ ವಿಲೇವಾರಿಯಲ್ಲಿ ವಿಳಂಬ ತೋರುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಸಕಾಲ ಅರ್ಜಿ ವಿಲೇವಾರಿಯಲ್ಲಿ ವಿಳಂಬ ತೋರುವ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.
ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳೊಂದಿಗೆ ಸಕಾಲ ಪ್ರಗತಿ ಪರಿಶೀಲನಾ ಸಭೆ ಮತ್ತು ಆನ್‍ಲೈನ್‍ನಲ್ಲಿ ಸಕಾಲ ಸ್ವಯಂಚಾಲಿತ ಕಾರಣ ಕೇಳುವ ಪ್ರಕ್ರಿಯೆಯ ತರಬೇತಿ ನೀಡುವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಸಕಾಲ ಅರ್ಜಿಗಳ ವಿಲೇವಾರಿಯಲ್ಲಿ, ಉಡುಪಿ ಜಿಲ್ಲೆಯು ಜುಲೈನಿಂದ ಅಗಸ್ಟ್ ತಿಂಗಳವರೆಗಿನ ಒಂದನೇ ಸ್ಥಾನ ಮತ್ತು ಅರ್ಜಿ ಸ್ವೀಕರಿಸುವುದರಲ್ಲಿ ಹತ್ತನೇ ಸ್ಥಾನದಲ್ಲಿದ್ದು, ಒಟ್ಟು ಸಾಧನೆಯಲ್ಲಿ ರಾಜ್ಯದಲ್ಲಿ ನಾಲ್ಕನೇ ಸ್ಥಾನದಲ್ಲಿದೆ, ಮುಂದಿನ ದಿನಗಳಲ್ಲಿ ಜಿಲ್ಲೆಯು ಒಂದನೇ ಸ್ಥಾನಕ್ಕೇರುವಂತಾಗಲು, ಎಲ್ಲಾ ಇಲಾಖೆಗಳು ನಿಗಧಿತ ಅವಧಿಯೊಳಗೆ ಸಾರ್ವಜನಿಕರಿಗೆ ಸೇವೆ ಒದಗಿಸಬೇಕು.
ಜಿ.ಪಂ ಅಧಿಕಾರಿಗಳು ಎಲ್ಲಾ ಗ್ರಾಮ ಪಂಚಾಯತ್‍ಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ತಿಳಿಸಿದ ಜಿಲ್ಲಾಧಿಕಾರಿ, ಸಕಾಲದಲ್ಲಿ ಗುರುತಿಸಲ್ಪಟ್ಟ ಸೇವೆಗಳನ್ನು, ಸಕಾಲ ಹೊರತುಪಡಿಸಿ ನೇರವಾಗಿ ನೀಡುವುದು ಕಂಡು ಬರುತ್ತಿದ್ದು, ಅಂತಹ ಅರ್ಜಿ ಸ್ವೀಕರಿಸಿ, ವಿಲೇವಾರಿ ಮಾಡುವ ಸಿಬ್ಬಂದಿಗಳನ್ನು ಅಮಾನತು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಕಾಲ ಅರ್ಜಿ ವಿಲೇವಾರಿಯಲ್ಲಿ ವಿಳಂಬವಾಗುತ್ತಿರುವುದಕ್ಕೆ ಕಾರಣ ಕೇಳುವ ನೋಟಿಸ್ ಅನ್ನು ಮುಂದಿನ ದಿನಗಳಲ್ಲಿ ಆನ್‍ಲೈನ್ ಮೂಲಕವೇ ಸಂಬಂದಪಟ್ಟ ಅಧಿಕಾರಿಗಳಿಗೆ ಕಳುಹಿಸಲಾಗುವುದು. ನೋಟೀಸ್ ನೀಡಿದ 7 ದಿನಗಳಲ್ಲಿ ಸಮಂಜಸ ಕಾರಣ ನೀಡಬೇಕು ಇಲ್ಲವಾದಲ್ಲಿ ಸಕ್ಷಮ ಪ್ರಾಧಿಕಾರಕ್ಕೆ ಆನ್‍ಲೈನ್ ಮೂಲಕವೇ ಅರ್ಜಿ ಸಲ್ಲಿಕೆಯಾಗಲಿದ್ದು, ತಪ್ಪಿತಸ್ಥರೆಂದು ಕಂಡುಬಂದಲ್ಲಿ, ದಂಡದ ಮೊತ್ತವನ್ನು ಪ್ರಕರಣ ಇತ್ಯರ್ಥವಾಗುವ ತನಕವೂ, ನೇರವಾಗಿ ಸಂಬಂಧಪಟ್ಟ ಅಧಿಕಾರಿ/ನೌಕರರ ವೇತನದಲ್ಲಿ ಕಡಿತಗೊಳ್ಳುವ ತಂತ್ರಾಂಶ ಸಹ ಸಿದ್ದವಾಗಿದೆ ಎಂದರು.
