ಕರ್ನಾಟಕದ 23 ತಾಲೂಕುಗಳು ಬರಪೀಡಿತ ಎಂದು ಘೋಷಣೆ – vishwanews24

Featured, ರಾಜ್ಯ ನ್ಯೂಸ್

ಕರ್ನಾಟಕದ 23 ತಾಲೂಕುಗಳು ಬರಪೀಡಿತ ಎಂದು ಘೋಷಣೆ

ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಮುಂದುವರಿದಿರುವ ಮಳೆ ಕೊರತೆ ಹಾಗೂ ಒಣಹವೆ ಪರಿಸ್ಥಿತಿಯ ನಡುವೆ ಕರ್ನಾಟಕ ಸರ್ಕಾರ ಮತ್ತೆ 23 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ.

2026ರ ಮುಂಗಾರು ಹಂಗಾಮಿನಲ್ಲಿ ಈವರೆಗೆ ಬರಪೀಡಿತ ಎಂದು ಅಧಿಸೂಚನೆ ಹೊರಡಿಸಿರುವ ತಾಲೂಕುಗಳ ಸಂಖ್ಯೆ 124ಕ್ಕೆ ಏರಿಕೆಯಾಗಿದೆ. ಮೊದಲ ಹಂತದಲ್ಲಿ ಆಗಸ್ಟ್ 27ರಂದು ಸರ್ಕಾರವು 2026ರ ಮುಂಗಾರು ಹಂಗಾಮಿಗೆ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿತ್ತು.

ನಮಗೆ ರಾಜಕೀಯಕ್ಕಿಂತ ಜನರ ಬದುಕು ಮುಖ್ಯ : ಸಿಎಂ. ಡಿ ಕೆ ಶಿ – vishwanews24

ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕೊರತೆ ಮುಂದುವರಿದ ಹಿನ್ನೆಲೆಯಲ್ಲಿ, ಉಳಿದ 139 ತಾಲೂಕುಗಳ ಪರಿಸ್ಥಿತಿಯನ್ನು KSNDMC ವೈಜ್ಞಾನಿಕವಾಗಿ ಮೌಲ್ಯಮಾಪನ ಮಾಡಿತ್ತು. ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಅವರ ನೇತೃತ್ವದ ನೈಸರ್ಗಿಕ ವಿಕೋಪಗಳ ಸಚಿವ ಸಂಪುಟ ಉಪಸಮಿತಿಯ ನಿರ್ದೇಶನದ ಮೇರೆಗೆ, 24 ತಾಲೂಕುಗಳ 214 ಗ್ರಾಮಗಳಲ್ಲಿ ಮೊಬೈಲ್ ಅಪ್ಲಿಕೇಶನ್‌ ಮೂಲಕ ಸ್ಥಳ ಪರಿಶೀಲನೆ ನಡೆಸಲಾಗಿತ್ತು. ಈ ಸ್ಥಳ ಪರಿಶೀಲನೆ ಹಾಗೂ KSNDMC ಸಲ್ಲಿಸಿದ ಸಮಗ್ರ ವರದಿಯ ಆಧಾರದ ಮೇಲೆ ಇದೀಗ 23 ಹೆಚ್ಚುವರಿ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ.

ಇವುಗಳಲ್ಲಿ 21 ತಾಲೂಕುಗಳನ್ನು ತೀವ್ರ ಬರಪೀಡಿತ ಹಾಗೂ ಎರಡು ತಾಲೂಕುಗಳನ್ನು ಮಧ್ಯಮ ಬರಪೀಡಿತ ಎಂದು ವರ್ಗೀಕರಿಸಲಾಗಿದೆ. ಈ ಘೋಷಣೆ ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಆರು ತಿಂಗಳ ಅವಧಿಗೆ ಅನ್ವಯವಾಗಲಿದೆ.

ತುಮಕೂರು ಜಿಲ್ಲೆಯ ತಿಪಟೂರು, ಕೊಪ್ಪಳ ಜಿಲ್ಲೆಯ ಕರಟಗಿ, ರಾಯಚೂರು ಜಿಲ್ಲೆಯ ಮಾನ್ವಿ, ಸಿಂಧನೂರು ಮತ್ತು ಸಿರವಾರ, ಕಲಬುರಗಿ ಜಿಲ್ಲೆಯ ಅಫಜಲಪುರ, ಆಳಂದ, ಚಿತ್ತಾಪುರ, ಕಲಬುರಗಿ, ಯಡ್ರಾಮಿ ಮತ್ತು ಶಹಾಬಾದ್, ಬೀದರ್ ಜಿಲ್ಲೆಯ ಭಾಲ್ಕಿ, ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ, ಬಬಲೇಶ್ವರ ಮತ್ತು ತಿಕೋಟಾ, ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ, ಧಾರವಾಡ ಜಿಲ್ಲೆಯ ಹುಬ್ಬಳ್ಳಿ, ನವಲಗುಂದ, ಹುಬ್ಬಳ್ಳಿ ನಗರ ಮತ್ತು ಅಣ್ಣಿಗೇರಿ, ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕುಗಳನ್ನು ತೀವ್ರ ಬರಪೀಡಿತ ಎಂದು ಘೋಷಿಸಲಾಗಿದೆ.

ಮಂಗಳೂರಿನಲ್ಲಿ ಮೊದಲ ಬಾರಿಗೆ ಮಹತ್ವದ ಸಚಿವ ಸಂಪುಟ ಸಭೆ: ಕರಾವಳಿ ಜನರ ದಶಕಗಳ ಬೇಡಿಕೆಗಳಿಗೆ ಸ್ಪಂದನೆಯ ನಿರೀಕ್ಷೆ – vishwanews24

ಕೊಡಗು ಜಿಲ್ಲೆಯ ಪೊನ್ನಂಪೇಟೆ ಮತ್ತು ವಿರಾಜಪೇಟೆ ತಾಲೂಕುಗಳನ್ನು ಮಧ್ಯಮ ಬರಪೀಡಿತ ಎಂದು ಘೋಷಿಸಲಾಗಿದೆ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯಸ್ಥರಾಗಿರುವ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ರಾಜ್ಯ ವಿಪತ್ತು ಪ್ರತಿಕ್ರಿಯಾ ನಿಧಿ (SDRF) ಮಾರ್ಗಸೂಚಿಗಳ ಅನ್ವಯ ಅಗತ್ಯ ಪರಿಹಾರ ಹಾಗೂ ತುರ್ತು ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಅಧಿಕಾರ ನೀಡಿದೆ.

Leave a Reply