ನಾಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಆಗಮನ -Vishwanews24
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದು, ಸಚಿವರಾಗಲು ಕಾಯುತ್ತಿದ್ದ ಆಕಾಂಕ್ಷಿ ಶಾಸಕರಲ್ಲಿ ಹುಮ್ಮಸ್ಸು, ನಿರೀಕ್ಷೆ, ಆತಂಕಗಳೆಲ್ಲ ಒಟ್ಟಿಗೆ ಕಾಣಿಸಿಕೊಂಡಿದೆ. ಹುಬ್ಬಳ್ಳಿಯಲ್ಲಿ ಪೌರತ್ವ ಕಾಯ್ದೆ(ಸಿಎಎ) ಕುರಿತು ಬೃಹತ್ ಜನಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ನಾಳೆ ಮಧ್ಯಾಹ್ನ 12.15ಕ್ಕೆ ಯಲಹಂಕ ವಾಯುನೆಲೆಗೆ ಅಮಿತ್ ಶಾ ಬಂದಿಳಿಯಲಿದ್ದಾರೆ. ಅಮಿತ್ ಶಾ ಮೊದಲ ಕಾರ್ಯಕ್ರಮ ಬೆಂಗಳೂರಿನಲ್ಲೇ ಇದೆ. ನಾಳೆ ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ವೇದಾಂತ ಭಾರತಿ ವಿವೇಕಾದೀಪಿನಿ ಮಹಾಸಮರ್ಪಣ ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಗಿಯಾಗಲಿದ್ದಾರೆ.
ಬಳಿಕ ಮಧ್ಯಾಹ್ನ 3.15ಕ್ಕೆ ಯಲಹಂಕ ವಾಯುನೆಲೆಯಿಂದ ಹುಬ್ಬಳ್ಳಿಗೆ ಅಮಿತ್ ಶಾ ಪ್ರಯಾಣ ಬೆಳೆಸಲಿದ್ದಾರೆ. ನಾಳೆ ಸಂಜೆ 4.30ಕ್ಕೆ ಹುಬ್ಬಳ್ಳಿಗೆ ತಲುಪಲಿರುವ ಅಮಿತ್ ಶಾ, ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ನೆಹರೂ ಸ್ಟೇಡಿಯಂಗೆ ಪ್ರಯಾಣಿಸಲಿದ್ದಾರೆ. ಸಂಜೆ 4.55 ರಿಂದ 5.30 ರವರೆಗೆ ನೆಹರೂ ಮೈದಾನದಲ್ಲಿ ಆಯೋಜಿಸಿರುವ ಸಿಎಎ ಕುರಿತ ಬೃಹತ್ ಜನಜಾಗೃತಿ ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಗವಹಿಸಲಿದ್ದಾರೆ. ಈ ವೇಳೆ ಸಿಎಂ ಯಡಿಯೂರಪ್ಪ ಸೇರಿದಂತೆ ಕೇಂದ್ರ ಸಚಿವರು, ಡಿಸಿಎಂ, ಸಚಿವರುಗಳು ಮತ್ತು ಪಕ್ಷದ ಪ್ರಮುಖರು ಅಮಿತ್ ಶಾ ಜೊತೆ ವೇದಿಕೆ ಹಂಚಿಕೊಳ್ಳಲಿದ್ದಾರೆ.
