ಮಂಗಳೂರು : ಅನುಮತಿ ಪಡೆಯದೆ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಸುದ್ದಿ ರವಾನೆ ಮಾಡುವವರ ವಿರುದ್ಧ ಕಠಿಣ ಕ್ರಮ: ಡಾ. ಪಿ.ಎಸ್. ಹರ್ಷ -Vishwanews24
ಮಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದಂತೆ ಪ್ರತಿಭಟನೆಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಸಂದೇಶ ರವಾನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಡಾ. ಪಿ.ಎಸ್. ಹರ್ಷ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿ ನಡೆಸಿ ಮಾತಾನಾಡಿದ ಅವರು, “ಕೆಲವು ಸಂಘಟನೆಗಳು ಇಲಾಖೆಯಿಂದ ಯಾವುದೇ ಅನುಮತಿ ಪಡೆಯದೆ ಏಕಾಏಕಿ ರಸ್ತೆ ತಡೆ ಮಾಡಿ ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ್ದಾರೆ. ಇದು ಕಾನೂನು ಬಾಹಿರ ಚಟುವಟಿಕೆಯಾಗಿದ್ದು ಅವರ ಮೇಲೆ ಈಗಾಗಲೇ ಕ್ರಮ ತೆಗೆದುಕೊಳ್ಳಲಾಗಿದೆ. ಇನ್ನು ಮುಂದೆ ಈ ರೀತಿ ಮಾಡಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ತಿಳಿಸಿದ್ದಾರೆ.
“ಡಿ. 20 ಹಾಗೂ 23ರಂದು ವಿವಿಧ ಸಂಘಗಳು ಪ್ರತಿಭಟನೆ ಮಾಡಲು ನಿರ್ಧಾರ ಮಾಡಿದ್ದಾರೆ ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶವೊಂದು ರವಾನೆ ಮಾಡಲಾಗುತ್ತಿತ್ತು. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಧಾರ್ಮಿಕ ಮುಖಂಡರಲ್ಲಿ ಚರ್ಚೆ ನಡೆಸಲಾಗಿದ್ದು ಪ್ರತಿಭಟನೆ ಕೈಬಿಡಲು ನಿರ್ಧಾರ ಮಾಡಿದ್ದಾರೆ. ಹಾಗೆಯೇ ಈಗಾಗಲೇ ಸುಮಾರು 7 ಸಂಘಟನೆಗಳಿಗೆ ಪ್ರತಿಭಟನೆ ಮಾಡಲು ಅವಕಾಶ ನೀಡಲಾಗಿದೆ” ಎಂದು ಹೇಳಿದ್ದಾರೆ.
