ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಶನಿವಾರ ನಿಷೇಧಾಜ್ಞೆ ಜಾರಿ
ಮಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ನೂತನ ಸರ್ಕಾರ ಶನಿವಾರ ವಿಶ್ವಾಸಮತ ಯಾಚನೆ ನಡೆಸಲಿದ್ದು, ಈ ಸಂದರ್ಭದಲ್ಲಿ ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರ್ತರು ಘರ್ಷಣೆಗೆ ಇಳಿಯುವ ಸಾಧ್ಯತೆ ಇದೆ ಎಂಬ ವರದಿಗಳನ್ನು ಆಧರಿಸಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಾದ್ಯಂತ ಶನಿವಾರ ಬೆಳಿಗ್ಗೆಯಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಕಾನೂನು ಸುವ್ಯವಸ್ಥೆ ಡಿಸಿಪಿ ಹನುಮಂತರಾಯ ಸಲ್ಲಿಸಿದ ವರದಿ ಆಧರಿಸಿ ನಗರ ಪೊಲೀಸ್ ಕಮಿಷನರ್ ವಿಪುಲ್ ಕುಮಾರ್ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.
ಶನಿವಾರ ಬೆಳಿಗ್ಗೆಯಿಂದ ಭಾನುವಾರ ಬೆಳಿಗ್ಗೆ 10 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.ಈ ಅವಧಿಯಲ್ಲಿ ಗುಂಪು ಸೇರುವುದು, ಪ್ರತಿಭಟನೆ, ಮೆರವಣಿಗೆ, ಪ್ರದರ್ಶನ, ಘೋಷಣೆ ಕೂಗುವುದು, ಕರಪತ್ರಗಳನ್ನು ಹಂಚುವುದನ್ನು ನಿಷೇಧಿಸಲಾಗಿದೆ. ನಗರದಾದ್ಯಂತ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
