ಮೂಡಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಮಹಿಳಾ ಆಯೋಗದಿಂದ ತನಿಖೆಗೆ ಸೂಚನೆ – vishwanews24
ಮೂಡಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಮಹಿಳಾ ಆಯೋಗದಿಂದ ತನಿಖೆಗೆ ಸೂಚನೆ
ಮಂಗಳೂರು: ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ. ಅವರ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಹಣದ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಮಹಿಳೆಯೊಬ್ಬರು ಆರೋಪಿಸಿದ್ದು, ಪ್ರಕರಣದ ಕುರಿತು ಕರ್ನಾಟಕ ರಾಜ್ಯ ಮಹಿಳಾ ಆಯೋಗವೂ ಗಮನ ಹರಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತನಿಖೆ ನಡೆಸುವಂತೆ ಸೂಚನೆ ನೀಡಿದೆ.
ದೂರು ನೀಡಿದ ಮಹಿಳೆಯರ ಹೇಳಿಕೆಯ ಪ್ರಕಾರ, ಸುಮಾರು ಎರಡು ವರ್ಷಗಳ ಹಿಂದೆ ನಡೆದಿದ್ದ ಒಂದು ಪ್ರಕರಣದಲ್ಲಿ ಮಹಿಳೆಯೊಬ್ಬರ ಗಂಡನನ್ನು ಬಂಧಿಸಲಾಗಿತ್ತು. ಆ ವೇಳೆ ಅವರನ್ನು ಬಿಡುಗಡೆಗೊಳಿಸಲು ಲೈಂಗಿಕವಾಗಿ ಸಹಕರಿಸಬೇಕೆಂದು ಇನ್ಸ್ಪೆಕ್ಟರ್ ತಿಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಜೊತೆಗೆ 25 ಲಕ್ಷ ರೂಪಾಯಿ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರು ಹಾಗೂ ಗಂಡನ ವಿರುದ್ಧ ರೌಡಿ ಶೀಟ್ ತೆರೆಯುವುದಾಗಿ ಬೆದರಿಕೆ ಹಾಕಿದ್ದರು ಎಂದು ಆರೋಪಿಸಿದ್ದರು.
ಈ ಹಿನ್ನೆಲೆಯಲ್ಲಿ ಮಹಿಳೆಯರು ಮುಖ್ಯಮಂತ್ರಿ, ಗೃಹ ಸಚಿವರು, ಪೊಲೀಸ್ ಮಹಾನಿರ್ದೇಶಕರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿ ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ಈ ದೂರಿನ ಆಧಾರದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದು ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ.
