ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಇಳಿಸುವ ಪ್ರಯತ್ನ ಮಾಡಿದರೆ ಸುಮ್ಮನಿರುವುದಿಲ್ಲ : ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ -Vishwanews24
ಹುಬ್ಬಳ್ಳಿ:ರಾಜ್ಯದಲ್ಲಿ ಲಿಂಗಾಯತರು ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದಾಗಲೆಲ್ಲ ಅವರಿಗೆ ವಿನಾಕಾರಣ ತೊಂದರೆ ಕೊಡುವ ಪ್ರಯತ್ನ ಮಾಡಲಾಗುತ್ತಿದೆ. ಒಂದು ವೇಳೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ತೊಂದರೆ ಕೊಟ್ಟು, ಅಧಿಕಾರದಿಂದ ಇಳಿಸುವ ಪ್ರಯತ್ನ ಮಾಡಿದರೇ, ಸುಮ್ಮನಿರುವುದಿಲ್ಲ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಎಲ್ಲ ಪಕ್ಷಗಳೂ ಲಿಂಗಾಯತ ಸಮುದಾಯದ ಮುಖ್ಯಮಂತ್ರಿಗಳನ್ನು ಕೆಳಗಿಳಿಸುವ ಪ್ರಯತ್ನ ಮಾಡಿವೆ. ಈಗ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬಿಜೆಪಿ ಕೆಳಗಿಳಿಸುವ ಪ್ರಯತ್ನ ನಡೆಸುತ್ತಿದೆ. ಇದರಿಂದ ಪಕ್ಷದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಯಡಿಯೂರಪ್ಪ ಉತ್ತಮ ಕೆಲಸ ಮಾಡುತ್ತಿದ್ದಾರೆ. ಅವರನ್ನು ಅವಧಿ ಪೂರ್ಣಗೊಳಿಸುವವರೆಗೆ ಮುಂದುವರಿಸಬೇಕು” ಎಂದರು.
”ಸಂದರ್ಭ ಬಂದರೆ ಸಮಾನ ಮನಸ್ಕ ಸ್ವಾಮೀಜಿಗಳು ಯಡಿಯೂರಪ್ಪ ಪರವಾಗಿ ನಿಲ್ಲುತ್ತೇವೆ. ಇದರಲ್ಲಿಯಾವುದೇ ಸಂಶಯವಿಲ್ಲ. ಬಿಜೆಪಿ ಮೇಲೆ ಲಿಂಗಾಯತರು ಮುನಿಸಿಕೊಳ್ಳುವ ಸಾಧ್ಯತೆ ತಳ್ಳಿಹಾಕುವಂತಿಲ್ಲ. ಒಬ್ಬರನ್ನು ಕೆಳಗೆ ಇಳಿಸಿ, ಇನ್ನೊಬ್ಬರನ್ನು ಮೇಲೆ ಹತ್ತಿಸುವ ಪ್ರಯತ್ನ ಮಾಡಬಾರದು” ಎಂದು ತಿಳಿಸಿದರು.
